ಸೌಜನ್ಯ ಪರ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲು ಸೆ.18ರಂದು ಪುತ್ತೂರು ಎ.ಸಿ ಸ್ಟೆಲ್ಲಾ ವರ್ಗಿಸ್ ಅವರು ಆದೇಶ ಹೊರಡಿಸಿದ್ದರು.ಇದರ ವಿರುದ್ಧ ಮಧ್ಯಂತರ ತಡೆ ಕೋರಿ ಮಹೇಶ್ ಶೆಟ್ಟಿ ತಿಮರೋಡಿ ತಮ್ಮ ವಕೀಲರ ಮೂಲಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಸ್ಟೆಲ್ಲಾ ವರ್ಗಿಸ್ ಅವರು ಸೆಪ್ಟೆಂಬರ್ 18 ರಂದು ಹೊರಡಿಸಿದ್ದ ಆದೇಶಕ್ಕೆ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ರಜಾಕಾಲದ ಏಕಸದಸ್ಯ ಪೀಠವು ಈಗ ಮಧ್ಯಂತರ ತಡೆ ನೀಡಿದೆ.
ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 32 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ತರುವ ಚಟುವಟಿಕೆಗಳಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಕಾಯ್ದೆಯ ಸೆಕ್ಷನ್ 55 ರ ಅಡಿಯಲ್ಲಿ ಈ ಗಡಿಪಾರು ಆದೇಶವನ್ನು ನೀಡಲಾಗಿತ್ತು.
ಹೈಕೋರ್ಟ್ ಮಧ್ಯಂತರ ತಡೆಯಿಂದಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಗಡಿಪಾರು ಆದೇಶದಿಂದ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಮುಂದಿನ ವಿಚಾರಣೆ ಅ.8 ರಂದು ನಡೆಯಲಿದೆ.

