ಬೆಂಗಳೂರು : ಕರ್ನಾಟಕ ರಾಜ್ಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಅಕ್ಟೋಬರ್ 11 ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಿನದಿಂದ ದಿನಕ್ಕೆ ತೀವ್ರತೆಯಲ್ಲಿ ಏರುಪೇರಾಗಬಹುದಾದರೂ, ಮಳೆ ಕಡಿಮೆಯಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ, ಇದು ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳ ಮೇಲೆ ಪರಿಣಾಮ ಬೀರುತ್ತದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಸೇರಿದಂತೆ ಹಲವೆಡೆ ಮಳೆಯಾಗಲಿದೆ. ಇನ್ನುಳಿದಂತೆ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ತುಂತುರು ಮಳೆಯಾಗುವ ನಿರೀಕ್ಷೆಯಿದೆ.

ಮಳೆಯ ನಡುವೆಯೇ ಕೆಲವೆಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ, ಮಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶದಲ್ಲಿ ವ್ಯತ್ಯಾಸ ಕಂಡುಬಂದಿದೆ. ಕರಾವಳಿ ಭಾಗಗಳಾದ ಹೊನ್ನಾವರ, ಕಾರವಾರ, ಮಂಗಳೂರು ಹಾಗೂ ಶಕ್ತಿನಗರದಲ್ಲೂ ಮಳೆಯ ಪ್ರಮಾಣ ಹೆಚ್ಚಿದೆ.
ಮಹಾರಾಷ್ಟ್ರದ ಕರಾವಳಿಯತ್ತ ಸಾಗುತ್ತಿದ್ದ ಶಕ್ತಿ ಚಂಡಮಾರುತವು ದುರ್ಬಲಗೊಂಡಿದ್ದು, ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಕ್ಟೋಬರ್ 8 ರವರೆಗೆ ತುಂತುರು ಮಳೆ ಹಾಗೂ ಚದುರಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

