ಹಿರಿಯೂರು : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಬಳಿ ಲಾರಿ ಡಿವೈಡರ್ ದಾಟಿ ಸೀಬರ್ಡ್ ಸ್ಲೀಪರ್ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು 17 ಮಂದಿ ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಸಂಭವಿಸಿದೆ,

ನಸುಕಿನ ಜಾವ 3 ಗಂಟೆಗೆ ನಡೆದ ಈ ಭೀಕರ ರಸ್ತೆ ಅಪಘಾತವು ಉತ್ತರ ಕನ್ನಡ ಭಾಗವನ್ನೇ ಶೋಕದಲ್ಲಿ ಮುಳುಗಿಸಿದೆ. ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ, ಬಸ್ ಕ್ಷಣಗಳಲ್ಲಿ ಬೆಂಕಿಗಾಹುತಿಯಾಯಿತು. ಬಸ್ಸಿನಲ್ಲಿದ್ದ 17 ಪ್ರಯಾಣಿಕರು ಸಜೀವ ದಹನವಾಗಿದ್ದರೆ.9 ಮಂದಿಯನ್ನು ಗಂಭೀರ ಸ್ಥಿತಿಯಲ್ಲಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರಲ್ಲಿ ಹೆಚ್ಚಿನವರು ಗೋಕರ್ಣ ಮೂಲದವರಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರ ಆಕ್ರಂದನ ಮುಗಿಲು ಮುಟ್ಟಿದೆ.

ಮೆಜೆಸ್ಟಿಕ್ನಿಂದ ಹೊರಟಿದ್ದ ಖಾಸಗಿ ಸೀಬರ್ಡ್ ಸ್ಲೀಪರ್ ಬಸ್ ಶಿವಮೊಗ್ಗ, ಹೊನ್ನಾವರ ಮಾರ್ಗವಾಗಿ ಗೋಕರ್ಣಕ್ಕೆ ತೆರಳುತ್ತಿತ್ತು. 32 ಆಸನ ಸಾಮರ್ಥ್ಯದ ಈ ಬಸ್ನಲ್ಲಿ 29 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಇವರಲ್ಲಿ 25 ಪ್ರಯಾಣಿಕರು ಗೋಕರ್ಣಕ್ಕೆ ತೆರಳುತ್ತಿದ್ದರೆ ಇಬ್ಬರು ಕುಮಟಾಕ್ಕೆ ಮತ್ತಿಬ್ಬರು ಶಿವಮೊಗ್ಗಕ್ಕೆ ಪ್ರಯಾಣಿಸುತ್ತಿದ್ದರು.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬೆಂಕಿ ನಂದಿಸಲು ಸಾಕಷ್ಟು ಸಮಯ ಹಿಡಿದಿದ್ದು, ಸುಟ್ಟು ಕರಕಲಾದ ದೇಹಗಳ ಗುರುತು ಪತ್ತೆ ಕಷ್ಟಕರವಾಗಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

