ಯಾದಗಿರಿ: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪ ಎದುರಿಸುತ್ತಿರುವ ಯಾದಗಿರಿಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾಗೆ ನ್ಯಾಯಾಲಯ ಬಿಗ್ ಶಾಕ್ ನೀಡಿದೆ. ಮುತ್ಯಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಯಾದಗಿರಿ ಜಿಲ್ಲಾ ಪ್ರಧಾನ ಮತ್ತು ವಿಶೇಷ ಸತ್ರ ನ್ಯಾಯಾಲಯವು ಇಂದು ವಜಾ ಮಾಡಿದೆ.

ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ (POCSO) ಪ್ರಕರಣದಲ್ಲಿ ಬಂಧನದಿಂದ ತಪ್ಪಿಸಿಕೊಳ್ಳಲು ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಮರಳುಸಿದ್ದರಾಧ್ಯ ಅವರು, ಸರ್ಕಾರಿ ವಕೀಲರ ಆಕ್ಷೇಪಣೆ ಮತ್ತು ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಜಾಮೀನು ನೀಡಲು ನಿರಾಕರಿಸಿದ್ದಾರೆ. ಕಳೆದ ಶುಕ್ರವಾರವಷ್ಟೇ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಲಯವು ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು. ಈಗ ಇಲ್ಲಿಯೂ ಅರ್ಜಿ ವಜಾಗೊಂಡಿರುವುದರಿಂದ ಮುತ್ಯಾ ಅನಿವಾರ್ಯವಾಗಿ ಮತ್ತೆ ಹೈಕೋರ್ಟ್ ಮೆಟ್ಟಿಲೇರಬೇಕಿದೆ

ಫೆಬ್ರವರಿ ತಿಂಗಳಲ್ಲಿ ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತ ಬಾಲಕಿಯೊಬ್ಬಳೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಇದು ಸಾರ್ವಜನಿಕ ವಲಯದಲ್ಲಿ ದೊಡ್ಡ ಆಕ್ರೋಶಕ್ಕೆ ಕಾರಣವಾಗಿತ್ತು. ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಈ ಬಗ್ಗೆ ಕಠಿಣ ಕ್ರಮಕ್ಕೆ ಸೂಚಿಸಿದ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳ ಆದೇಶದಂತೆ ಫೆಬ್ರವರಿ 25ರಂದು ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

