ನವದೆಹಲಿ : ದೇಶದ ರಾಜಕೀಯ ದಿಕ್ಕನ್ನು ನಿರ್ಧರಿಸಬಲ್ಲ ಬಹುನಿರೀಕ್ಷಿತ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ನಡೆಯಲಿರುವ ಚುನಾವಣೆಯ ವೇಳಾಪಟ್ಟಿಯನ್ನು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗ ಭಾನುವಾರ ಪ್ರಕಟಿಸಿದೆ.
ಚುನಾವಣಾ ದಿನಾಂಕ ಪ್ರಕಟವಾಗುತ್ತಿದ್ದಂತೆಯೇ ಸಂಬಂಧಿತ ರಾಜ್ಯಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಚುನಾವಣಾ ಆಯೋಗದ ಮಾಹಿತಿಯಂತೆ, ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಭದ್ರತಾ ಕಾರಣಗಳಿಂದಾಗಿ ಪಶ್ಚಿಮ ಬಂಗಾಳದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ಅಸ್ಸಾಂನಲ್ಲಿ ಏಪ್ರಿಲ್ 9ಕ್ಕೆ ಮತದಾನ
ಈ ಬಾರಿ ಅಸ್ಸಾಂ ವಿಧಾನಸಭಾ ಚುನಾವಣೆಗೆ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಮತ ಎಣಿಕೆ ಮೇ 4ರಂದು ನಡೆಯಲಿದೆ. ಕಳೆದ ಬಾರಿ ಇಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿ ಭರ್ಜರಿ ಜಯ ಸಾಧಿಸಿ ಅಧಿಕಾರಕ್ಕೇರಿತ್ತು. 126 ಸದಸ್ಯರ ವಿಧಾನಸಭೆಯಲ್ಲಿ ಎನ್ಡಿಎ 75 ಸ್ಥಾನಗಳನ್ನು ಗೆದ್ದಿತ್ತು.
ಅಸ್ಸಾಂ ವಿಧಾನಸಭಾ ಚುನಾವಣೆಗೆ ಮಾರ್ಚ್ 16 ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಕೆಗೆ ಮಾರ್ಚ್, 23 ಕೊನೆಯ ದಿನವಾಗಿದೆ. ಮತದಾನ ಏಪ್ರಿಲ್, 09 ನಡೆಯಲಿದೆ. ಮತ ಎಣಿಕೆ ಮೇ 04 ರಂದು ನಡೆಯಲಿದೆ.
ಪಶ್ಚಿಮ ಬಂಗಾಳದಲ್ಲಿ ಎರಡು ಹಂತದ ಮತದಾನ
ದೇಶದ ಗಮನ ಸೆಳೆಯುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದೆ. ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮಾರ್ಚ್ 30 ಆರಂಭವಾಗಲಿದ್ದು, ಏಪ್ರಿಲ್, 09 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮತದಾನ ಏಪ್ರಿಲ್ 23, 29 ನಡೆಯಲಿದ್ದು, ಮೇ, 04 ಮತ ಎಣಿಕೆ ನಡೆಯಲಿದೆ.
ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಮತದಾನ
ದಕ್ಷಿಣ ಭಾರತದ ಪ್ರಮುಖ ರಾಜ್ಯವಾದ ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಈ ವಿಧಾನಸಭಾ ಚುನಾವಣೆಗೆ ಮಾರ್ಚ್, 30 ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್, 06 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಏಪ್ರಿಲ್ 23 ಕ್ಕೆ ಮತದಾನ ನಡೆಯಲಿದೆ. ಮೇ, 04 ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ.
ಕೇರಳದಲ್ಲಿ ಕಾಂಗ್ರೆಸ್–ಎಲ್ಡಿಎಫ್ ನಡುವೆ ಹಣಾಹಣಿ
ಕೇರಳದಲ್ಲೂ ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಹಾಗೂ ಎಡಪಕ್ಷಗಳ ಎಲ್ಡಿಎಫ್ ನಡುವೆ ನೇರ ಹಣಾಹಣಿ ನಡೆಯಲಿದೆ.
ಈ ವಿಧಾನಸಭಾ ಚುನಾವಣೆಗೆ ಮಾರ್ಚ್ 16 ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಹಾಗೂ ನಾಮಪತ್ರ ಸಲ್ಲಿಕೆಗೆ ಮಾರ್ಚ್ 23 ರಂದು ಕೊನೆಯ ದಿನವಾಗಿದೆ. ಏಪ್ರಿಲ್, 09 ಮತದಾನ ನಡೆಯಲಿದ್ದು, ಮೇ 4 ರಂದು ಪಲಿತಾಂಶ ಹೊರ ಬೀಳಲಿದೆ.
ಪುದುಚೇರಿಯಲ್ಲಿ ಏಪ್ರಿಲ್ 9ಕ್ಕೆ ಮತದಾನ
ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಮೇ 4ರಂದು ಮತ ಎಣಿಕೆ ನಡೆಯಲಿದೆ. ಪುದುಚೇರಿ ವಿಧಾನಸಭಾ ಚುನಾವಣೆಗೆ ಮಾರ್ಚ್ 16 ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು ನಾಮಪತ್ರ ಸಲ್ಲಿಕೆಗೆ ಮಾರ್ಚ್ 23 ಕೊನೆಯ ದಿನ. ಹಾಗೂ ಏಪ್ರಿಲ್ 9 ರಂದು ಮತದಾನ ನಡೆಯಲಿದ್ದು, ಮೇ 4 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

