ಬೆಂಗಳೂರು: ಸಿಲಿಕಾನ್ ಸಿಟಿಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣವು ಬರೋಬ್ಬರಿ 18 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಇಂಡಿಯನ್ ಪ್ರೀಮಿಯರ್ ಲೀಗ್ (IPL) 19 ನೇ ಆವೃತ್ತಿಯ ಉದ್ಘಾಟನಾ ಪಂದ್ಯಕ್ಕೆ ಸಾಕ್ಷಿಯಾಗುತ್ತಿದೆ. ಇಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿವೆ. ಆದರೆ, ಕಳೆದ ವರ್ಷದ ಐಪಿಎಲ್ ಸಂಭ್ರಮಾಚರಣೆ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ನಗರ ಪೊಲೀಸರು, ಈ ಬಾರಿ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಭದ್ರತೆಯನ್ನು ಕಲ್ಪಿಸಿದ್ದಾರೆ.
ಕಳೆದ ವರ್ಷದ ದುರಂತ ಮರುಕಳಿಸದಂತೆ ಎಚ್ಚರಿಕೆ ವಹಿಸಲು ನಗರ ಪೊಲೀಸ್ ಆಯುಕ್ತರ ಸೂಚನೆಯ ಮೇರೆಗೆ ಸುಮಾರು 2,000 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಈ ಭದ್ರತಾ ಪಡೆಯ ಉಸ್ತುವಾರಿಯನ್ನು ಪಶ್ಚಿಮ ವಲಯದ ಜಂಟಿ ಪೊಲೀಸ್ ಆಯುಕ್ತರಾದ ವಂಶಿಕೃಷ್ಣ ಅವರು ವಹಿಸಿಕೊಂಡಿದ್ದಾರೆ. ವಿಶೇಷವಾಗಿ 7 ಸ್ಪೆಷಲ್ ಸ್ಕ್ವಾಡ್ಗಳನ್ನು ರಚಿಸಲಾಗಿದ್ದು, ಇವು ಕ್ರೀಡಾಂಗಣದ ಒಳಗೆ ಮತ್ತು ಹೊರಗೆ ಜನರ ಚಲನವಲನದ ಮೇಲೆ ಹದ್ದಿನ ಕಣ್ಣಿಡಲಿವೆ.

ಇಂದು ಮಧ್ಯಾಹ್ನದಿಂದಲೇ ಪೊಲೀಸರು ಕ್ರೀಡಾಂಗಣದ ಸುತ್ತಮುತ್ತಲಿನ ಆಯಕಟ್ಟಿನ ಜಾಗಗಳಲ್ಲಿ ನಿಯೋಜನೆಗೊಂಡಿದ್ದಾರೆ. ಕ್ರೀಡಾಂಗಣದ ಗೇಟ್ ಬಳಿ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಹೆಚ್ಚಿಸಲಾಗಿದೆ ಮತ್ತು ಪ್ರತಿಯೊಬ್ಬ ಅಭಿಮಾನಿಗಳನ್ನು ತಪಾಸಣೆ ನಡೆಸಿದ ನಂತರವೇ ಒಳಕ್ಕೆ ಬಿಡಲಾಗುತ್ತಿದೆ. ಟಿಕೆಟ್ ಇಲ್ಲದವರು ಕ್ರೀಡಾಂಗಣದ ಹತ್ತಿರ ಬರದಂತೆ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ. ಅಲ್ಲದೆ, ಸೋಷಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿ ಹರಡುವವರ ಮೇಲೆಯೂ ಸೈಬರ್ ಕ್ರೈಂ ಪೊಲೀಸರು ನಿಗಾ ವಹಿಸಿದ್ದಾರೆ
ಬಾರಿಯ 19ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಎರಡು ತಿಂಗಳಿಗೂ ಹೆಚ್ಚು ಕಾಲ ನಡೆಯಲಿದೆ. ಮೇ 24 ರವರೆಗೆ ಲೀಗ್ ಹಂತದ ಪಂದ್ಯಗಳು ನಡೆಯಲಿದ್ದು, ಮೇ 31 ರಂದು ಭವ್ಯ ಫೈನಲ್ ಪಂದ್ಯ ಜರುಗಲಿದೆ. ಒಟ್ಟು 10 ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿದ್ದು, 65 ದಿನಗಳ ಕಾಲ ಒಟ್ಟು 74 ಪಂದ್ಯಗಳು ಕ್ರಿಕೆಟ್ ಪ್ರೇಮಿಗಳನ್ನು ರಂಜಿಸಲಿವೆ

