ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ರಾಜ್ಯದ ಜನತೆಗೆ ಹಲವು ಮಹತ್ವದ ಘೋಷಣೆಗಳನ್ನು ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮಾಣವಚನ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳು, ಯುವಕರು, ಉದ್ಯೋಗಾಕಾಂಕ್ಷಿಗಳು ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ನೀಡುವುದಾಗಿ ಘೋಷಿಸಿದರು. ಪದವಿ ಕಾಲೇಜು ಹಂತದವರೆಗಿನ ಗಂಡು ಮತ್ತು ಹೆಣ್ಣು ವಿದ್ಯಾರ್ಥಿಗಳಿಗೂ ಈ ಯೋಜನೆ ಅನ್ವಯವಾಗಲಿದ್ದು, ಉಚಿತ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ತಿಳಿಸಿದರು.
“ಈ ಮುಖ್ಯಮಂತ್ರಿ ಕುರ್ಚಿ ನನ್ನದಲ್ಲ, ಇದು ರಾಜ್ಯದ ಜನರದ್ದು. ಜನರ ಸೇವೆ ಮಾಡುವ ಜವಾಬ್ದಾರಿಯನ್ನು ರಾಜ್ಯದ ಜನರು ನಮಗೆ ನೀಡಿದ್ದಾರೆ. ಅವರ ನಿರೀಕ್ಷೆಗಳನ್ನು ಈಡೇರಿಸುವುದೇ ನಮ್ಮ ಗುರಿ” ಎಂದು ಸಿಎಂ ಹೇಳಿದರು
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, “ಇದು ಹೊಸ ದಿನ, ಹೊಸ ಜವಾಬ್ದಾರಿಗಳ ಆರಂಭ. ರಾಜ್ಯದ ರೈತರು, ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಯುವಜನರ ಅಭಿವೃದ್ಧಿಗಾಗಿ ಹಲವು ಹೊಸ ಯೋಜನೆಗಳನ್ನು ಜಾರಿಗೆ ತರಲಾಗುವುದು. ಜನರ ಸಮಸ್ಯೆಗಳ ಬಗ್ಗೆ ನನಗೆ ಸಂಪೂರ್ಣ ಅರಿವಿದೆ. ಉತ್ತಮ ಕರ್ನಾಟಕ ನಿರ್ಮಾಣಕ್ಕಾಗಿ ನಮ್ಮ ಸಂಪುಟ ಒಟ್ಟಾಗಿ ಕೆಲಸ ಮಾಡಲಿದೆ” ಎಂದು ಹೇಳಿದರು.
“ಮಾತು ಕೊಟ್ಟರೆ ಅದನ್ನು ಉಳಿಸಿಕೊಳ್ಳಬೇಕು ಎಂಬುದು ನನ್ನ ನಂಬಿಕೆ. ರಾಜ್ಯದ ಅಭಿವೃದ್ಧಿಗಾಗಿ ದೊಡ್ಡ ಸವಾಲುಗಳನ್ನು ಎದುರಿಸಲು ನಾವು ಸಿದ್ಧರಾಗಿದ್ದೇವೆ. ಇದು ಜನರ ಸರ್ಕಾರವಾಗಿದ್ದು, ಜನಸೇವೆಯೇ ನಮ್ಮ ಪ್ರಮುಖ ಸಂಕಲ್ಪ” ಎಂದು ಮುಖ್ಯಮಂತ್ರಿ ಹೇಳಿದರು.
ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 56 ಸಾವಿರ ಸರ್ಕಾರಿ ಉದ್ಯೋಗ ಭರ್ತಿ, ಭಾರತ್ ಜೋಡೋ ಯುವಕರ ಸಂಘ ಸ್ಥಾಪನೆ ಸೇರಿದಂತೆ ಹಲವು ಜನಪರ ಘೋಷಣೆಗಳನ್ನು ಮಾಡುವ ಮೂಲಕ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ತನ್ನ ಆಡಳಿತದ ದಿಕ್ಕನ್ನು ಸ್ಪಷ್ಟಪಡಿಸಿದೆ.

