ಮಂಗಳೂರು : ಕಲಾಸಂಗಮ ಚಾರಿಟೇಬಲ್ ಟ್ರಸ್ಟ್ (ರಿ.), ಮಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಹಯೋಗದಲ್ಲಿ ಟ್ರಸ್ಟ್ನ 15ನೇ ವಾರ್ಷಿಕೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಸನ್ಮಾನ ಹಾಗೂ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮವು ಜೂನ್ 14ರ ಭಾನುವಾರ ಸಂಜೆ 4.30ರಿಂದ ರಾತ್ರಿ 9 ಗಂಟೆಯವರೆಗೆ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಕೇಶವ ಹೆಗಡೆ ಮಂಗಳೂರು ತಿಳಿಸಿದರು .
ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮವನ್ನು ಧರ್ಮದರ್ಶಿ ಹಾಗೂ ಕರ್ನಾಟಕ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಡಾ.ಹರಿಕೃಷ್ಣ ಪುನರೂರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಮೊಯಿದ್ದೀನ್ ಬಾವಾ, ಕೆಎಂಸಿ ಮಂಗಳೂರಿನ ಡಾ.ಪದ್ಮನಾಭ ಕಾಮತ್ ಹಾಗೂ ಅಖಿಲ್ ಅಸೋಸಿಯೇಟ್ಸ್ನ ಪ್ರೊಪ್ರೈಟರ್ ದಿನೇಶ್ ಪೈ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಲೆಕ್ಕಪತ್ರ ಪರಿಶೋಧಕ ಸಿಎ. ಎಸ್.ಎಸ್.ನಾಯಕ್ ವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಶಿವರಾಮ ಜೋಗಿ, ಬಿ.ಸಿ.ರೋಡ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಬಳಿಕ “ಅಂಗದ ಸಂಧಾನ” ಎಂಬ ಬಡಗುತಿಟ್ಟಿನ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಸುಧಾಕರ ಪೇಜಾವರ, ರವಿ ಅಲೆವೂರಾಯ, ಚರಣ್ ಕುಮಾರ್ ಹಾಗೂ ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು.


