ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ಜೋಸೆಫ್ ವಿಜಯ್, ಉಡುಪಿಯ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಆಗಮಿಸುತ್ತಿರುವ ಅವರು, ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಜೂನ್ 12 ರಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮೊದಲ ಬಾರಿಗೆ ಭೇಟಿ ನೀಡಲಿದ್ದಾರೆ. ಜೂನ್ 12 ರಂದು ಮಧ್ಯಾಹ್ನ 12:30ಕ್ಕೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ತೆರಳಲಿದ್ದಾರೆ. ಮಧ್ಯಾಹ್ನ 3:00 ಗಂಟೆಗೆ ದೇವಾಲಯಕ್ಕೆ ಆಗಮಿಸಿ, ವಿಶೇಷ ಪೂಜೆ ಹಾಗೂ ದೇವಿಯ ದರ್ಶನ ಪಡೆಯಲಿದ್ದಾರೆ.ದೇವರ ದರ್ಶನದ ನಂತರ ಸಂಜೆ ರಸ್ತೆ ಮಾರ್ಗವಾಗಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಿಂತಿರುಗಿ, ವಿಶೇಷ ವಿಮಾನದ ಮೂಲಕ ಚೆನ್ನೈಗೆ ಪ್ರಯಾಣ ಬೆಳೆಸಲಿದ್ದಾರೆ.
ಮುಖ್ಯಮಂತ್ರಿಗಳಿಗೆ ‘Z+’ ಶ್ರೇಣಿಯ ಭದ್ರತೆ ಇರುವುದರಿಂದ, ಕರ್ನಾಟಕ ಪೊಲೀಸರು ಮತ್ತು ಗುಪ್ತಚರ ಇಲಾಖೆಯಿಂದ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯ ಹಾಗೂ ಅರಣ್ಯ ಪ್ರದೇಶದ ಮೂಲಕ ಸಂಚರಿಸುವ ಅವರ ಮಾರ್ಗದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗಿದೆ.

