ಇಸ್ಲಾಮಾಬಾದ್: ಪಾಕಿಸ್ತಾನ ಸೇನೆಯ Mi-17 ಹೆಲಿಕಾಪ್ಟರ್ ಬುಧವಾರ ಉತ್ತರದ ಮುಜಫರಾಬಾದ್ ನಗರದಲ್ಲಿ ಪತನಗೊಂಡು ಅದರಲ್ಲಿದ್ದ ಎಲ್ಲಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸೇನೆ ತಿಳಿಸಿದೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನ ಸೇನೆಗೆ ಸೇರಿದ ಯುದ್ಧ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದಾಗಿ ಪತನಗೊಂಡಿದೆ. ಈ ದುರಂತದಲ್ಲಿ ಅದರಲ್ಲಿದ್ದ ಎಲ್ಲಾ ಸೈನಿಕರು ದುರ್ಮರಣಕ್ಕೀಡಾಗಿದ್ದಾರೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಆಯಕಟ್ಟಿನ ಪ್ರದೇಶವೊಂದರಲ್ಲಿ ಈ ದುರಂತ ಸಂಭವಿಸಿದೆ. ಹೆಲಿಕಾಪ್ಟರ್ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ನಿಯಂತ್ರಣ ಕಳೆದುಕೊಂಡು ನೆಲಕ್ಕೆ ಅಪ್ಪಳಿಸಿದ್ದು, ಬೆಂಕಿ ಹೊತ್ತಿಕೊಂಡ ಪರಿಣಾಮ ಅದರಲ್ಲಿದ್ದ ಉನ್ನತ ಮಿಲಿಟರಿ ಅಧಿಕಾರಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹೆಲಿಕಾಪ್ಟರ್ ಅಪಘಾತಕ್ಕೆ ಕಾರಣವೇನೆಂದು ಕಂಡುಹಿಡಿಯಲು ಮಿಲಿಟರಿ ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಅಪಘಾತದ ನಿಖರವಾದ ತಾಂತ್ರಿಕ ಕಾರಣವನ್ನು ಖಚಿತಪಡಿಸಿಕೊಳ್ಳಲು ತನಿಖಾ ಮಂಡಳಿಗೆ ಆದೇಶಿಸಲಾಗಿದೆ” ಎಂದು ISPR ತಿಳಿಸಿದೆ. ಅಪಘಾತದ ಸಮಯದಲ್ಲಿ ಎಷ್ಟು ಸಿಬ್ಬಂದಿ ಇದ್ದರು ಎಂಬುದನ್ನು ಅಧಿಕಾರಿಗಳು ಇನ್ನೂ ಬಹಿರಂಗಪಡಿಸಿಲ್ಲ.


