ಮಂಗಳೂರು : ಜನನ ಮತ್ತು ಮರಣ ಪ್ರಮಾಣ ಪತ್ರಗಳ ವಿತರಣೆಯಲ್ಲಿ ಉಂಟಾಗುತ್ತಿರುವ ವಿಳಂಬ ಹಾಗೂ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನಿಯೋಗವು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರನ್ನು ಭೇಟಿ ಮಾಡಿ ಚರ್ಚಿಸಿತು.
ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು, ಪಾಸ್ಪೋರ್ಟ್ ಅರ್ಜಿದಾರರು ಸೇರಿದಂತೆ ಹಲವಾರು ನಾಗರಿಕರು ಜನನ ಮತ್ತು ಮರಣ ಪ್ರಮಾಣ ಪತ್ರಗಳಿಗಾಗಿ ಅನಗತ್ಯವಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿರುವ ಬಗ್ಗೆ ಆಯುಕ್ತರ ಗಮನಕ್ಕೆ ತರಲಾಯಿತು. ಜನನ ಮತ್ತು ಮರಣ ಪ್ರಮಾಣ ಪತ್ರಗಳು ನಾಗರಿಕರ ಪ್ರಮುಖ ದಾಖಲೆಗಳಾಗಿದ್ದು, ಅವುಗಳನ್ನು ಶೀಘ್ರವಾಗಿ ವಿತರಿಸುವಂತೆ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಬಾಕಿ ಇರುವ ಅರ್ಜಿಗಳನ್ನು ಆದ್ಯತೆಯ ಮೇರೆಗೆ ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು. ಸಮಸ್ಯೆಯನ್ನು ಶೀಘ್ರ ಪರಿಹರಿಸುವ ಭರವಸೆಯನ್ನು ಆಯುಕ್ತರು ನೀಡಿದರು.ಆದಾಗ್ಯೂ ಸಮಸ್ಯೆ ಮುಂದುವರಿದಲ್ಲಿ ಹಾಗೂ ಸಾರ್ವಜನಿಕರಿಗೆ ನ್ಯಾಯ ದೊರಕದಿದ್ದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಾರ್ವಜನಿಕರೊಂದಿಗೆ ಸೇರಿ ಹೋರಾಟದ ಮಾರ್ಗವನ್ನು ಅನುಸರಿಸಲು ಹಿಂಜರಿಯುವುದಿಲ್ಲ ಎಂದು ಎಚ್ಚರಿಕೆ ನೀಡಲಾಗಿದೆ.


