ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಭಕ್ತರು ಸಲ್ಲಿಸಿದ ದೇಣಿಗೆಯ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಇಂದು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಅವರೊಂದಿಗೆ ಟ್ರಸ್ಟ್ನ ಹಿರಿಯ ಸದಸ್ಯ ಅನಿಲ್ ಮಿಶ್ರಾ ಕೂಡ ರಾಜೀನಾಮೆ ಸಲ್ಲಿಸಿದ್ದು, ಈ ಬೆಳವಣಿಗೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ರಾಮ ಮಂದಿರದಲ್ಲಿ ಸಂಗ್ರಹವಾಗಿದ್ದ ದೇಣಿಗೆ ಹಣ ದುರುಪಯೋಗಗೊಂಡಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾದ ಕೆಲವೇ ದಿನಗಳಲ್ಲಿ ಈ ಮಹತ್ವದ ಬೆಳವಣಿಗೆ ನಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು, ಅನುಕಲ್ಪ್ ಮಿಶ್ರಾ, ಅವಿನಾಶ್ ಶುಕ್ಲಾ, ಕರುಣೇಶ್ ಪಾಂಡೆ, ಮನೀಶ್ ಯಾದವ್, ಲವಕುಶ್ ಮಿಶ್ರಾ, ರಾಮ ಶಂಕರ್ ಮಿಶ್ರಾ ಹಾಗೂ ಸುಭಾಷ್ ಶ್ರೀವಾಸ್ತವ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದೆ. ಅಯೋಧ್ಯೆಯ ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್ ಪಾಂಡೆ ಅವರು ರಾಮ ಮಂದಿರದ ದೇಣಿಗೆಯಲ್ಲಿ ಸುಮಾರು ₹7ರಿಂದ ₹7.5 ಕೋಟಿ ಮೊತ್ತ ಕಳುವಾಗಿದೆ ಎಂದು ಆರೋಪಿಸಿದ ಬಳಿಕ ಸರ್ಕಾರ ತನಿಖೆಗೆ ಮುಂದಾಗಿತ್ತು.
ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಜೂನ್ 14ರಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಮನವಿಯ ಮೇರೆಗೆ ರಾಜ್ಯ ಸರ್ಕಾರ ಮೂರು ಸದಸ್ಯರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ತನಿಖೆಗೆ ಆದೇಶಿಸಿತ್ತು. ಎಸ್ಐಟಿಯ ಪ್ರಾಥಮಿಕ ವರದಿಯ ಆಧಾರದ ಮೇಲೆ ಮೊದಲ ಎಫ್ಐಆರ್ ದಾಖಲಿಸಲಾಗಿದ್ದು, ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ.
ಪ್ರಕರಣದ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಠಿಣ ನಿಲುವು ವ್ಯಕ್ತಪಡಿಸಿದ್ದಾರೆ. “ಜನರ ನಂಬಿಕೆಗೆ ದ್ರೋಹ ಮಾಡಿದವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಭಕ್ತರು ಸಮರ್ಪಿಸಿದ ಕಾಣಿಕೆಯನ್ನು ದುರುಪಯೋಗಪಡಿಸಿಕೊಂಡ ಪ್ರತಿಯೊಬ್ಬರೂ ಕಾನೂನಿನ ಮುಂದೆ ಉತ್ತರಿಸಲೇಬೇಕು. ಸತ್ಯವನ್ನು ಹೊರತಂದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ,” ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಬೆಳವಣಿಗೆಗಳ ಬೆನ್ನಲ್ಲೇ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನಲ್ಲಿ ಆಡಳಿತಾತ್ಮಕ ಮಟ್ಟದಲ್ಲಿ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆಗಳೂ ವ್ಯಕ್ತವಾಗಿವೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಇನ್ನಷ್ಟು ಮಾಹಿತಿಗಳು ಹೊರಬರುವ ನಿರೀಕ್ಷೆಯಿದೆ.
ಯಾರು ಈ ಚಂಪತ್ ರಾಯ್?
ಚಂಪತ್ ರಾಯ್ ಅವರು 1980ರ ದಶಕದಿಂದ ರಾಮಮಂದಿರ ಚಳವಳಿಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದಾರೆ. ಉತ್ತರ ಪ್ರದೇಶದ ಬಿಜನೋರ್ ಮೂಲದ ಅವರು, ಆರ್ಎಸ್ಎಸ್ ಸಿದ್ಧಾಂತದಿಂದ ಪ್ರೇರಿತರಾಗಿ ಸಂಘದ ಪೂರ್ಣಕಾಲಿಕ ಪ್ರಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಂದಿರ ಚಳವಳಿಗೆ ಸೇರುವ ಮೊದಲು ರಸಾಯನಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಅವರು, 1992ರ ಕರಸೇವೆಯಲ್ಲೂ ಸಕ್ರಿಯವಾಗಿ ಭಾಗವಹಿಸಿದ್ದರು. ಅವಿವಾಹಿತರಾಗಿರುವ ಅವರು ಹಲವು ವರ್ಷಗಳಿಂದ ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸಿದ್ದರು.

