ಮಂಗಳೂರು, ಜು. 6: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.), ಕೃಷ್ಣಾಪುರ-ಕಾಟಿಪಳ್ಳ, ಮಂಗಳೂರು ವತಿಯಿಂದ 48ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನು ಸೆಪ್ಟೆಂಬರ್ 14ರಿಂದ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ತಿಳಿಸಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಿತಿಯು ಕಳೆದ ಹಲವು ವರ್ಷಗಳಿಂದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಪರಿಸರ ಜಾಗೃತಿ, ಶೈಕ್ಷಣಿಕ ಪುರಸ್ಕಾರ, ಆರೋಗ್ಯ ಸಹಾಯ ಸೇರಿದಂತೆ ಹಲವು ಸಮಾಜಮುಖಿ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದ್ದು, ಈ ಬಾರಿಯ ಗಣೇಶೋತ್ಸವವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಗಣೇಶೋತ್ಸವದ ಅಂಗವಾಗಿ ಅಷ್ಟಚತ್ವಾರಿಂಶತ್ ನಾರಿಕೇಳ (48 ತೆಂಗಿನಕಾಯಿ) ಗಣಯಾಗ, ಮೂಡಪ್ಪ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.
ಗಣೇಶೋತ್ಸವದ ಪೂರ್ವಭಾವಿಯಾಗಿ ತುಳು ಭಾಷೆ, ಸಂಸ್ಕೃತಿ ಹಾಗೂ ರಂಗಭೂಮಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಸೆಪ್ಟೆಂಬರ್ 6ರಿಂದ 12ರವರೆಗೆ ‘ಕೃಷ್ಣಾಪುರ ರಂಗಪರ್ವ-2026’ ಅಂತರ್ರಾಜ್ಯ ತುಳು ಸಾಮಾಜಿಕ ಹಾಸ್ಯ ನಾಟಕ ಸ್ಪರ್ಧೆಯನ್ನು ಕೃಷ್ಣಾಪುರ ಯುವಕ ಮಂಡಲ ಮೈದಾನದ ಗಣೇಶ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಉಪಾಧ್ಯಕ್ಷರಾದ ಪಿ. ಸುಧಾಕರ ಕಾಮತ್, ಲಕ್ಷ್ಮೀ ಶೇಖರ್ ದೇವಾಡಿಗ, ಪ್ರಶಾಂತ್ ಕುಮಾರ್, ಸದಸ್ಯರಾದ ವಿಠಲ ಶೆಟ್ಟಿ, ರಾಕೇಶ್ ಕೋಟ್ಯಾನ್ ಹಾಗೂ ಅಶೋಕ್ ಕೃಷ್ಣಾಪುರ ಉಪಸ್ಥಿತರಿದ್ದರು.

