ಮಂಗಳೂರು: ಮಂಗಳೂರು ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಳೆದ ಕೆಲವು ದಿನಗಳಿಂದ ವರುಣನ ಆರ್ಭಟ ಜೋರಾಗಿದೆ. ವ್ಯಾಪಕವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ.
ದ.ಕ ಜಿಲ್ಲೆ ಹಾಗೂ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬುಧವಾರ ಜುಲೈ 8 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ,ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಅಧಿಕೃತವಾಗಿ ಆದೇಶಿಸಿದ್ದಾರೆ.
ಕಳೆದ ಎರಡು ದಿನಗಳಿಂದ ದ.ಕ ಜಿಲ್ಲಾದ್ಯಾಂತ ಅವಿರಾಮವಾಗಿ ಮಳೆ ಸುರಿಯುತ್ತಿದೆ. ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸಾರಿಗೆ ಸಂಪರ್ಕಕ್ಕೆ ಅಲ್ಲಲ್ಲಿ ಅಡಚಣೆಯಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಾಲೆಗಳಿಗೆ ತೆರಳಲು ತೊಂದರೆಯಾಗಬಹುದು ಮತ್ತು ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ಈ ತೀರ್ಮಾನ ಕೈಗೊಂಡಿದ್ದಾರೆ.

