ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಶಾದ್ (32) ಹಾಗೂ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಚೌಡ್ಲಿ ಕಾನ್ವೆಂಟ್ ರಸ್ತೆ ನಿವಾಸಿ ಅಬ್ದುಲ್ ನಾಸಿರ್ (41) ಸೇರಿದ್ದಾರೆ. ನೌಶಾದ್ನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದ್ದು, ಅಬ್ದುಲ್ ನಾಸಿರ್ನನ್ನು ಕೇರಳದ ಕೊಚ್ಚಿಯಲ್ಲಿ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಎನ್ಐಎ ತನಿಖೆಯ ಪ್ರಕಾರ, ಈ ಇಬ್ಬರು ಆರೋಪಿಗಳು ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದ ಪ್ರಮುಖ ಆರೋಪಿಗಳಿಗೆ ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದರು. ಹತ್ಯೆಯ ನಂತರ ಪ್ರಮುಖ ಶೂಟರ್ಗಳು ಹಾಗೂ ಇತರ ಆರೋಪಿಗಳಿಗೆ ಮೈಸೂರು, ಚಾಮರಾಜನಗರ ಮತ್ತು ತಮಿಳುನಾಡಿನ ಈರೋಡ್ ಭಾಗಗಳಲ್ಲಿ ಸುರಕ್ಷಿತ ಅಡಗುತಾಣಗಳನ್ನು ವ್ಯವಸ್ಥೆ ಮಾಡಿಕೊಟ್ಟಿರುವ ಗಂಭೀರ ಆರೋಪ ಇವರ ಮೇಲಿದೆ. ತನಿಖೆಯಲ್ಲಿ ಈ ಇಬ್ಬರ ಪಾತ್ರ ಬೆಳಕಿಗೆ ಬಂದ ನಂತರ ಅವರನ್ನು ಆರೋಪಿಗಳ ಪಟ್ಟಿಗೆ ಸೇರಿಸಲಾಗಿತ್ತು.

ಈ ಪ್ರಕರಣದಲ್ಲಿ ಒಟ್ಟು 27 ಮಂದಿಯನ್ನು ಆರೋಪಿಗಳಾಗಿ ಗುರುತಿಸಲಾಗಿದ್ದು, ಬಹುತೇಕರನ್ನು ಈಗಾಗಲೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆದರೆ ಕೆಲವು ಆರೋಪಿಗಳು ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಕಾರಣ ಎನ್ಐಎ ವಿಶೇಷ ತಂಡಗಳನ್ನು ರಚಿಸಿ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿತ್ತು.
ತಲೆಮರೆಸಿಕೊಂಡಿದ್ದ ಆರೋಪಿಗಳ ಬಗ್ಗೆ ನಿಖರ ಮಾಹಿತಿ ನೀಡುವವರಿಗೆ ತಲಾ ಎರಡು ಲಕ್ಷ ರೂಪಾಯಿ ಬಹುಮಾನ ಘೋಷಿಸಿ ಎನ್ಐಎ ಸಾರ್ವಜನಿಕರಿಂದಲೂ ಮಾಹಿತಿ ಕೋರಿತ್ತು. ಇದೇ ವೇಳೆ ಮತ್ತೊಬ್ಬ ಆರೋಪಿ ಅಬ್ದುಲ್ ನಾಸಿರ್ (24) ವಿದೇಶಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಆತನಿಗಾಗಿ ವಿವಿಧ ಏಜೆನ್ಸಿಗಳ ಸಹಯೋಗದಲ್ಲಿ ಶೋಧ ಕಾರ್ಯ ಮುಂದುವರಿದಿದೆ
2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದರು. ಈ ಘಟನೆ ರಾಜ್ಯ ಮಾತ್ರವಲ್ಲದೆ ರಾಷ್ಟ್ರ ಮಟ್ಟದಲ್ಲಿಯೂ ಭಾರೀ ಸಂಚಲನ ಸೃಷ್ಟಿಸಿತ್ತು. ಬಳಿಕ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಹಸ್ತಾಂತರಿಸಲಾಗಿತ್ತು.

