ಮಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಬರದ ಆತಂಕ ಹೆಚ್ಚುತ್ತಿದ್ದು, ಸರ್ಕಾರ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಆರೋಪಿಸಿದರು.
ನಗರದ ಸರ್ಕ್ಯೂಟ್ ಹೌಸ್ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,, ಮಳೆ ಕೊರತೆಯಿಂದ ಭತ್ತ, ರಾಗಿ ಹಾಗೂ ದ್ವಿದಳ ಧಾನ್ಯಗಳ ಬಿತ್ತನೆ ಸಮರ್ಪಕವಾಗಿ ನಡೆದಿಲ್ಲ. ಕಳೆದ ವರ್ಷ ತುಂಬಿದ್ದ ಜಲಾಶಯಗಳು ಈ ಬಾರಿ ನೀರಿನ ಕೊರತೆಯನ್ನು ಎದುರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು

ಬರ ನಿರ್ವಹಣೆಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿಗಳನ್ನು ರಚಿಸಿ, ರಾಜ್ಯ ಸರ್ಕಾರವೇ ತನ್ನದೇ ಆದ ಅಧ್ಯಯನ ನಡೆಸಿ ಸಮಗ್ರ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಬೇಕು. ಕೇಂದ್ರದ ತಂಡದ ನಿರೀಕ್ಷೆಯಲ್ಲಿ ಕಾಲಹರಣ ಮಾಡಬಾರದು ಎಂದು ಒತ್ತಾಯಿಸಿದರು.
ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆ ಬಿತ್ತನೆ ಪೂರ್ಣಗೊಂಡಿಲ್ಲ. ಯೂರಿಯಾ ಬೇಡಿಕೆಯೂ ಕುಂಠಿತವಾಗಿದ್ದು, ಸರ್ಕಾರ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ನೀರಿನ ಸಮಸ್ಯೆಯ ಲಕ್ಷಣಗಳು ಗೋಚರಿಸುತ್ತಿದ್ದು, ಕಡಲ್ಕೊರೆತ ಹಾಗೂ ತಡೆಗೋಡೆ ಕುಸಿತ ಸೇರಿದಂತೆ ಸ್ಥಳೀಯ ಸಮಸ್ಯೆಗಳಿಗೂ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಬೋಜೇಗೌಡ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡರಾದ ಶಶಿರಾಜ್ ಶೆಟ್ಟಿ ಕೊಳಂಬೆ, ಅಕ್ಷಯ್ ಸುವರ್ಣ, ಜಾಕೆ ಮಾಧವ ಗೌಡ, ವಿಲ್ಸೆಂಟ್, ಯೋಗೀಶ್ ಶೆಟ್ಟಿ ಜೆಪ್ಪು ಹಾಗೂ ಇತರರು ಉಪಸ್ಥಿತರಿದ್ದರು.

