ಮಂಗಳೂರು: ಉಳ್ಳಾಲದಲ್ಲಿ ಮರುಕಳಿಸುತ್ತಿರುವ ಕಡಲ್ಕೊರೆತ ಸಮಸ್ಯೆಗೆ ತಾತ್ಕಾಲಿಕ ಕಾಮಗಾರಿಗಳ ಬದಲು ಶಾಶ್ವತ ಪರಿಹಾರ ಕಲ್ಪಿಸುವಂತೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ ಆಗ್ರಹಿಸಿದರು.
ನಗರದ ಸರ್ಕ್ಯೂಟ್ ಹೌಸ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಳ್ಳಾಲ ಕ್ಷೇತ್ರವನ್ನು ಹಲವು ಬಾರಿ ಪ್ರತಿನಿಧಿಸಿರುವ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮತ್ತು ಅವರ ಕುಟುಂಬಕ್ಕೆ ಈ ಭಾಗದ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವು ಇದೆ. ಇಂತಹ ಪರಿಸ್ಥಿತಿಯಲ್ಲೂ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಲ್ಪಿಸದಿರುವುದು ವಿಷಾದನೀಯ ಎಂದು ಹೇಳಿದರು.

ಮರವಂತೆ ಹಾಗೂ ಮುಂಬೈ ಸೇರಿದಂತೆ ಹಲವು ಕರಾವಳಿ ಪ್ರದೇಶಗಳಲ್ಲಿ ಯಶಸ್ವಿಯಾಗಿ ಜಾರಿಯಲ್ಲಿರುವ ಕಡಲ್ಕೊರೆತ ನಿಯಂತ್ರಣ ಮಾದರಿಯನ್ನು ಉಳ್ಳಾಲದಲ್ಲೂ ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಬೇಕು ಎಂದು ಅವರು ಸಲಹೆ ನೀಡಿದರು.
ಕಡಲ್ಕೊರೆತದಿಂದ ಸ್ಥಳೀಯ ನಿವಾಸಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜೀವನ ದುಸ್ತರವಾಗಿದೆ. ಸಂಕಷ್ಟದಲ್ಲಿರುವ ಕುಟುಂಬಗಳಿಗೆ ತಕ್ಷಣ ನೆರವು ನೀಡಿ, ಅವರ ಜೀವ ಮತ್ತು ಆಸ್ತಿಪಾಸ್ತಿಗಳ ರಕ್ಷಣೆಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡರಾದ ಶಶಿರಾಜ್ ಶೆಟ್ಟಿ ಕೊಳಂಬೆ, ಅಕ್ಷಯ್ ಸುವರ್ಣ, ಜಾಕೆ ಮಾಧವ ಗೌಡ, ವಿಲ್ಸೆಂಟ್, ಯೋಗೀಶ್ ಶೆಟ್ಟಿ ಜೆಪ್ಪು ಸೇರಿದಂತೆ ಇತರರು ಉಪಸ್ಥಿತರಿದ್ದರು.

