ಮಂಗಳೂರು, ಜು. 20: ನಗರದ ಕಣ್ಣೂರು 52ನೇ ವಾರ್ಡಿನ ದ್ಯಂಬು ಪ್ರದೇಶದಲ್ಲಿ ತಡೆಗೋಡೆ ಕುಸಿದು ಮನೆಗಳಿಗೆ ಹಾನಿಯಾಗಿರುವ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೊಹಮ್ಮದ್ ಬಶೀರ್ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ಆಲಿಸಿದ ಅವರು, ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರಿಂದ ಮಾಹಿತಿ ಪಡೆದು ಪರಿಸ್ಥಿತಿಯನ್ನು ಅವಲೋಕಿಸಿದರು.

ಬಳಿಕ ಸಂಬಂಧಿತ ಇಂಜಿನಿಯರ್ ಹಾಗೂ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಅಪಾಯಕಾರಿಯಾಗಿರುವ ಕಲ್ಲುಗಳು ಹಾಗೂ ಮಣ್ಣನ್ನು ತೆರವುಗೊಳಿಸಿ ಅಗತ್ಯ ಸುರಕ್ಷತಾ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಹಾನಿಗೊಳಗಾದ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಬೇಕು. ಅಲ್ಲದೆ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳನ್ನು ಒತ್ತಾಯಿಸಿರುವುದಾಗಿ ಮೊಹಮ್ಮದ್ ಬಶೀರ್ ತಿಳಿಸಿದ್ದಾರೆ.

