ನವದೆಹಲಿ: ದೇಶಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದ ನೀಟ್ (NEET-UG) ಪರೀಕ್ಷೆ ಅಕ್ರಮ ಪ್ರಕರಣದ ಬೆಳವಣಿಗೆಗೆ ಮಹತ್ವದ ತಿರುವು ಸಿಕ್ಕಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ಹಲವು ದಿನಗಳಿಂದ ಪರೀಕ್ಷಾ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆ ಕುರಿತು ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದ ಹಿನ್ನೆಲೆ ಈ ಬೆಳವಣಿಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಪ್ರಧಾನ್ ಅವರ ರಾಜೀನಾಮೆ ಬಳಿಕ, ಕಳೆದ ಕೆಲವು ದಿನಗಳಿಂದ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. “ನಾವು ಗೆದ್ದಿದ್ದೇವೆ” ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು, ವಿದ್ಯಾರ್ಥಿಗಳ ಹೋರಾಟಕ್ಕೆ ನ್ಯಾಯ ದೊರೆತಿದೆ ಎಂದು ಅಭಿಪ್ರಾಯಪಟ್ಟರು. ಸಾಮಾಜಿಕ ಜಾಲತಾಣಗಳಲ್ಲಿ ಈ ಸಂಭ್ರಮಾಚರಣೆಯ ವಿಡಿಯೊಗಳು ಕೂಡ ವ್ಯಾಪಕವಾಗಿ ವೈರಲ್ ಆಗಿವೆ.
ಇದೇ ವೇಳೆ, ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಅಧಿಕೃತ ‘X’ ಖಾತೆಯಲ್ಲಿ ರಾಜೀನಾಮೆ ಕುರಿತು ಸುದೀರ್ಘ ಪತ್ರವನ್ನು ಪ್ರಕಟಿಸಿದ್ದಾರೆ. ಈ ನಿರ್ಧಾರವು ಯಾವುದೇ ವೈಯಕ್ತಿಕ ಗೌರವದ ಪ್ರಶ್ನೆಯಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಕಳೆದ ನಾಲ್ಕು ದಶಕಗಳಿಂದ ವಿದ್ಯಾರ್ಥಿಗಳ ಹಿತಾಸಕ್ತಿ ಹಾಗೂ ದೇಶದ ಶಿಕ್ಷಣ ವ್ಯವಸ್ಥೆಯ ಅಭಿವೃದ್ಧಿಗಾಗಿ ಕೆಲಸ ಮಾಡಿರುವುದಾಗಿ ತಿಳಿಸಿದ್ದಾರೆ.
“ಸಶಕ್ತ ಭಾರತದ ನಿರ್ಮಾಣಕ್ಕೆ ಗುಣಮಟ್ಟದ ಶಿಕ್ಷಣವೇ ಅಡಿಪಾಯ. ದೇಶದ ಯುವಜನರ ಕನಸುಗಳನ್ನು ನನಸಾಗಿಸುವುದು ನನ್ನ ಸಾರ್ವಜನಿಕ ಜೀವನದ ಪ್ರಮುಖ ಗುರಿಯಾಗಿದೆ. ಈ ಜವಾಬ್ದಾರಿಯನ್ನು ನೀಡಿದ ಪ್ರಧಾನಮಂತ್ರಿಯವರಿಗೆ ನಾನು ಕೃತಜ್ಞನಾಗಿದ್ದೇನೆ” ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

