ಮಂಗಳೂರು: ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಬಡವರಿಗೆ ಉಚಿತ ಮನೆಗಳನ್ನು ನಿರ್ಮಿಸಿಕೊಡುತ್ತಿರುವ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರ ಮನೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಗುರುವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಸಂತೋಷ್ ಕುಮಾರ್ ರೈ ಅವರ ಕದ್ರಿಯ ನಿವಾಸಕ್ಕೆ ತೆರಳಿದ ಬಿ.ಎಲ್. ಸಂತೋಷ್ ಅವರು, ಅವರ ಆರೋಗ್ಯ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದುಕೊಂಡರು.

ತೀವ್ರ ಅನಾರೋಗ್ಯದ ನಡುವೆಯೂ ಸಂತೋಷ್ ರೈ ಅವರು ಕೈಗೊಂಡಿರುವ ಸಮಾಜಸೇವೆ ಮತ್ತು ಬಡವರ ನೆರವಿನ ಕಾರ್ಯಗಳನ್ನು ಶ್ಲಾಘಿಸಿದ ಅವರು, ಪ್ರಸ್ತುತ ಸನ್ನಿವೇಶದಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ನಗರ ಉತ್ತರ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕಿಶೋರ್ ಭಂಡಾರಿ, ಜಿಲ್ಲಾ ಪ್ರಭಾರಿ ಭರತ್ ಮಡಿಕೇರಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಮುಖಂಡರಾದ ವಿಕಾಸ್ ಪುತ್ತೂರು, ಮನೋಹರ್ ಶೆಟ್ಟಿ ಕದ್ರಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

