ಮಂಗಳೂರು : ನಗರದ ಖಾಸಗಿ ಕಾಲೇಜೊಂದರ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಅದೇ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳ ತಂಡ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣವು ಮೇಲ್ನೋಟಕ್ಕೆ ರ್ಯಾಗಿಂಗ್ಗೆ ಸಂಬಂಧಿಸಿದಂತೆ ಕಂಡುಬರುತ್ತಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.
ಮಂಗಳೂರು ನಗರದ ಗುಜ್ಜರಕೆರೆ ಸಮೀಪದ ಟೀ ಅಂಗಡಿ ಬಳಿ ಈ ಘಟನೆ ನಡೆದಿದ್ದು, ದ್ವಿತೀಯ ವರ್ಷದ ಐದಾರು ಮಂದಿ ವಿದ್ಯಾರ್ಥಿಗಳು ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆಯಲ್ಲಿ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಇದು ರ್ಯಾಗಿಂಗ್ ಪ್ರಕರಣದಂತೆಯೇ ಕಂಡುಬಂದಿದ್ದು, ಹಲ್ಲೆಗೆ ನಿಖರ ಕಾರಣವೇನು ಹಾಗೂ ಘಟನೆ ರ್ಯಾಗಿಂಗ್ಗೆ ಸಂಬಂಧಿಸಿದದ್ದೇ ಎಂಬುದರ ಕುರಿತು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ. ತನಿಖೆ ಪೂರ್ಣಗೊಂಡ ಬಳಿಕವಷ್ಟೇ ಘಟನೆಯ ಸತ್ಯಾಸತ್ಯತೆ ಬಹಿರಂಗವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

