ಮಂಗಳೂರು: ವಯೋವೃದ್ಧರು, ವಿಧವೆಯರು, ಅಂಗವಿಕಲರು ಸೇರಿದಂತೆ ದುರ್ಬಲ ವರ್ಗದವರಿಗೆ ನೀಡಲಾಗುವ ಸಾಮಾಜಿಕ ಭದ್ರತಾ ಪಿಂಚಣಿಗೆ ಕರ್ನಾಟಕ ಸರ್ಕಾರ ನಿಗದಿಪಡಿಸಿರುವ ₹32 ಸಾವಿರ ವಾರ್ಷಿಕ ಆದಾಯ ಮಿತಿಯನ್ನು ಕೈಬಿಡಬೇಕು ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆಗ್ರಹಿಸಿದ್ದಾರೆ.
ನಗರದ ಓಷನ್ ಪರ್ಲ್ ಹೋಟೆಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ₹32 ಸಾವಿರ ಆದಾಯ ಪ್ರಮಾಣಪತ್ರ ಕಡ್ಡಾಯಗೊಳಿಸಿರುವುದರಿಂದ ವಯೋವೃದ್ಧರು, ವಿಧವೆಯರು ಹಾಗೂ ಅಂಗವಿಕಲರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಇದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದರು.
ತೆಲಂಗಾಣ, ಹರಿಯಾಣ ಹಾಗೂ ಕೇರಳ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಆದಾಯ ಮಿತಿ ಅತ್ಯಂತ ಕಡಿಮೆಯಾಗಿದೆ. ಸಾಮಾಜಿಕ ಭದ್ರತಾ ಯೋಜನೆಗಳಿಗೆ ರಾಜ್ಯಾದ್ಯಂತ ಒಂದೇ ಸಾಮಾನ್ಯ ಮಾನದಂಡ ನಿಗದಿಪಡಿಸಿ, ಪ್ರಸ್ತುತ ಜೀವನಮಟ್ಟಕ್ಕೆ ಅನುಗುಣವಾಗಿ ಆದಾಯ ಮಿತಿಯನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಬಿಪಿಎಲ್ ಕಾರ್ಡ್ಗೆ ₹3 ಲಕ್ಷದವರೆಗೆ ಆದಾಯ ಮಿತಿ ಹೆಚ್ಚಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿರುವಾಗ, ಸಾಮಾಜಿಕ ಭದ್ರತಾ ಪಿಂಚಣಿಗೆ ಕೇವಲ ₹32 ಸಾವಿರ ಮಿತಿ ವಿಧಿಸಿರುವುದು ದ್ವಂದ್ವ ನೀತಿಯಾಗಿದೆ ಎಂದು ಟೀಕಿಸಿದರು.
ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳನ್ನು ಕಚೇರಿಗಳಿಗೆ ಅಲೆದಾಡಿಸುವ ಬದಲು, ಸರ್ಕಾರವೇ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಅರ್ಹರಿಗೆ ಸೌಲಭ್ಯ ಕಲ್ಪಿಸಬೇಕು. ಇದರಿಂದ ಭ್ರಷ್ಟಾಚಾರಕ್ಕೂ ಕಡಿವಾಣ ಹಾಕಬೇಕು ಎಂದು ಅವರು ಆಗ್ರಹಿಸಿದರು.
ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವ ಉದ್ದೇಶದಿಂದ ಯಂಗ್ ಡೆಮಾಕ್ರಟ್ಸ್–ದಕ್ಷಿಣ ಕನ್ನಡ ಜಿಲ್ಲಾ ಯುವ ಅಸೆಂಬ್ಲಿ ನಾಳೆ ಉದ್ಘಾಟನೆಯಾಗಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ಜಿಲ್ಲಾಧ್ಯಕ್ಷ ಅಶ್ರಫ್ ಅಡ್ದೂರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಉಪಸ್ಥಿತರಿದ್ದರು.

