ಮಂಗಳೂರು : ಮಂಗಳೂರಿನ ಪಂಪ್ ವೆಲ್ ನಿಂದ ನಂತೂರು ಕಡೆಗೆ ತೆರಳುವ ಸರ್ವಿಸ್ ರಸ್ತೆಯ ಬದಿಯಲ್ಲಿ ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ದೊರೆತ ಮಾಹಿತಿಯಂತೆ, ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ತೆರಳಿ ದಾಳಿ ನಡೆಸಿ, ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ.
ಕೇರಳದ, ಮಂಜೇಶ್ವರ ವರ್ಕಾಡಿಯ ಮೊಹಮ್ಮದ್ ಇರ್ಷಾದ್ (30 ವರ್ಷ) ಬಂಧಿತ ಆರೋಪಿಯಾಗಿದ್ದಾನೆ.
ದಾಳಿ ಸಂದರ್ಭದಲ್ಲಿ ಆರೋಪಿಯ ವಶದಿಂದ 13.69 ಗ್ರಾಂ ತೂಕದ MDMA ಮಾದಕ ವಸ್ತು, ಅಂದಾಜು ₹1,36,000/- ಮೌಲ್ಯದ MDMA, ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿ ಕೊಂಡ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ ₹2,94,500/- ಆಗಿರುತ್ತದೆ.
ಈ ಕುರಿತು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅ.ಕ್ರ. 82/2026, ಕಲಂ 8(c), 22(c) ಎನ್.ಡಿ.ಪಿ.ಎಸ್. ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

