ಮಂಗಳೂರು: ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 5 ವರ್ಷಗಳ ಸಾಧಾರಣ ಕಾರಾಗೃಹ ಶಿಕ್ಷೆ ಹಾಗೂ ₹35 ಸಾವಿರ ದಂಡ ವಿಧಿಸಿ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
ಕಡಬ ಕುದ್ಮಾರು ನಿವಾಸಿ ಅಬ್ದುಲ್ಲಾ (64) ಶಿಕ್ಷೆಗೆ ಗುರಿಯಾದ ಆರೋಪಿ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 354(ಎ)(1), 506 ಹಾಗೂ ಪೋಕ್ಸೋ ಕಾಯ್ದೆ-2012ರ ಕಲಂ 8ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸುಮಂಗಲಾ ಚಕಲಬ್ಬಿ ಅವರು ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿ, ಆರೋಪಿಗೆ 5 ವರ್ಷಗಳ ಸಾಧಾರಣ ಕಾರಾಗೃಹ ಶಿಕ್ಷೆ ಹಾಗೂ ₹35 ಸಾವಿರ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ.
ಪ್ರಕರಣದ ಅಂದಿನ ತನಿಖಾಧಿಕಾರಿ ಹಾಗೂ ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರ ಅಭಿಯೋಜಕ ಪುಷ್ಪರಾಜ್ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.

