ನವದೆಹಲಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡ್ನ ಹಲ್ದ್ವಾನಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶುದ್ಧೀಕರಣಕ್ಕೆ ಸಂಬಂಧಿಸಿದಂತೆ ಅವರು ನೀಡಿದ ಹೇಳಿಕೆಗಳು ಪರಿಶಿಷ್ಟ ಜಾತಿ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಅಮಿತ್ ಕುಮಾರ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ್ದ ಸ್ಥಳವನ್ನು ಬಿಜೆಪಿ ಕಾರ್ಯಕರ್ತರು ಶುದ್ಧೀಕರಣ ಮಾಡಿದ್ದ ವಿಚಾರವನ್ನು ರಾಹುಲ್ ಗಾಂಧಿ ತಮ್ಮ ಹೇಳಿಕೆಯಲ್ಲಿ ಖಂಡಿಸಿದ್ದರು. ಈ ಹೇಳಿಕೆಗಳು ಜಾತಿ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿವೆ ಎಂದು ದೂರುದಾರರು ಆರೋಪಿಸಿದ್ದಾರೆ.
ಆಗಸ್ಟ್ 29ರಂದು ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಶುದ್ಧೀಕರಣದ ಘಟನೆಯನ್ನು ಅಸ್ಪೃಶ್ಯತೆಯ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದರಿಂದ ಶುದ್ಧೀಕರಣದಲ್ಲಿ ಭಾಗವಹಿಸಿದ್ದವರನ್ನು ದಲಿತ ವಿರೋಧಿಗಳು ಹಾಗೂ ಅಸ್ಪೃಶ್ಯತೆ ಆಚರಿಸುವವರಂತೆ ಬಿಂಬಿಸಿದಂತಾಗಿದೆ ಎಂದು ಅಮಿತ್ ಕುಮಾರ್ ಆರೋಪಿಸಿದ್ದಾರೆ.
ಆಗಸ್ಟ್ 8ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ನ ‘ವಿಜಯ್ ಶಂಖನಾದ’ ರ್ಯಾಲಿ ನಡೆದಿತ್ತು. ರ್ಯಾಲಿಯ ಬಳಿಕ ಮೈದಾನದಲ್ಲಿ ಕಸ ಹಾಗೂ ಇತರ ವಸ್ತುಗಳು ಕಂಡುಬಂದ ಹಿನ್ನೆಲೆಯಲ್ಲಿ ಆಗಸ್ಟ್ 11ರಂದು ತಾವು ಸೇರಿದಂತೆ ಕೆಲವರು ಸ್ಥಳವನ್ನು ಸ್ವಚ್ಛಗೊಳಿಸಿ ಹವನ ನಡೆಸಿದ್ದಾಗಿ ದೂರುದಾರರು ತಿಳಿಸಿದ್ದಾರೆ. ಈ ಕ್ರಮವನ್ನು ಧಾರ್ಮಿಕ ಶುದ್ಧೀಕರಣದ ಭಾಗವಾಗಿ ಕೈಗೊಂಡಿದ್ದೇವೆ ಎಂದು ಅವರು ಹೇಳಿದ್ದಾರೆ.
ಆದರೆ, ಈ ಶುದ್ಧೀಕರಣಕ್ಕೂ ಜಾತಿಗೂ ಯಾವುದೇ ಸಂಬಂಧವಿಲ್ಲ ಎಂದು ದೂರುದಾರರು ಸ್ಪಷ್ಟಪಡಿಸಿದ್ದಾರೆ. ರಾಹುಲ್ ಗಾಂಧಿಯವರ ಹೇಳಿಕೆಗಳಿಂದ ತಮ್ಮ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
ಎಫ್ಐಆರ್ ದಾಖಲಿಸುವ ಸಂದರ್ಭದಲ್ಲಿ ಅಮಿತ್ ಕುಮಾರ್ ಅವರೊಂದಿಗೆ ಶ್ರೀರಾಮ ಸೇನಾ ಧರ್ಮಾರ್ಥ ಸೇವಾ ನ್ಯಾಸ್ನ ಸದಸ್ಯ ವಿನೋದ್ ಆರ್ಯ ಕೂಡ ಉಪಸ್ಥಿತರಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

