ತ್ರಿಶೂರ್: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಕಾಯಮಂಗಲಂನ ಪಣಂಬಿಕುನ್ನು ಪ್ರದೇಶದಲ್ಲಿ ಶುಕ್ರವಾರ ಮಧ್ಯರಾತ್ರಿ ಸುಮಾರು 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಪ್ರದೇಶದಲ್ಲಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳೆಲ್ಲರೂ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ನ ಪಿಎಸ್ಎನ್ಎ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಕಾಲೇಜಿನ ವಿದ್ಯಾರ್ಥಿ ಗುರುತಿನ ಚೀಟಿ ಪತ್ತೆಯಾಗಿದ್ದು, ಮೃತರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ.
ಮಧುರೈ ನೋಂದಣಿ ಹೊಂದಿರುವ ಏಳು ಆಸನಗಳ ಕಾರಿನಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಗುರುವಾಯೂರಿನಿಂದ ಕೊಡುಂಗಲ್ಲೂರು ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಅಪಘಾತದ ವೇಳೆ ರಸ್ತೆಬದಿಯಲ್ಲಿ ಮೂರು ಲಾರಿಗಳು ನಿಂತಿದ್ದವು ಎನ್ನಲಾಗಿದೆ. ಮಹಾರಾಷ್ಟ್ರ ನೋಂದಣಿ ಹೊಂದಿದ್ದ ಲಾರಿಯೊಂದಕ್ಕೆ ಕಾರು ಡಿಕ್ಕಿ ಹೊಡೆದಿದೆ. ನಿರ್ಮಾಣ ಕಾಮಗಾರಿ ನಡೆಯುತ್ತಿದ್ದರೂ ಸೂಕ್ತ ಸೂಚನಾ ಫಲಕಗಳ ಕೊರತೆಯಿತ್ತು ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ. ಇದೇ ವೇಳೆ ಕಾರು ಅತಿವೇಗದಲ್ಲಿ ಸಂಚರಿಸುತ್ತಿತ್ತು ಎಂಬ ಮಾಹಿತಿಯೂ ಲಭ್ಯವಾಗಿದೆ.
ಅಪಘಾತದ ಸದ್ದು ಕೇಳಿ ಸ್ಥಳೀಯರು ಹಾಗೂ ಲಾರಿಯಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಕಾರನ್ನು ಕತ್ತರಿಸಿ ಒಳಗಿದ್ದವರನ್ನು ಹೊರತೆಗೆದಿದ್ದಾರೆ.
ಮೃತದೇಹಗಳನ್ನು ಕೊಡಂಗಲ್ಲೂರಿನ ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ಘಟನೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

