ಮಂಗಳೂರು: ಅಷ್ಟಮಿ ಪ್ರಯುಕ್ತ ತೋಕೂರು ಸುಬ್ರಮಣ್ಯ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿದ್ದ ಭಜನೆ ಕಾರ್ಯಕ್ರಮದ ವೇಳೆ ಯುವಕನೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಮನಕಲಕುವ ಘಟನೆ ತಡರಾತ್ರಿ ನಡೆದಿದೆ.
ಮೃತರನ್ನು ತೋಕೂರು ನಿವಾಸಿ ಶ್ರೀನಾಥ್ ಶೆಟ್ಟಿಗಾರ್ (38) ಎಂದು ಗುರುತಿಸಲಾಗಿದೆ. ಭಜನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಜನೆ ಮಾಡುತ್ತಿದ್ದ ಸಂದರ್ಭ ಶ್ರೀನಾಥ್ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಶ್ರೀನಾಥ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಅಷ್ಟಮಿ ಹಬ್ಬದ ಪ್ರಯುಕ್ತ ಊರಿಗೆ ಆಗಮಿಸಿದ್ದರು. ಸ್ಥಳೀಯ ಸಂಘಟನೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವ್ಯಕ್ತಿಯಾಗಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಅಕಾಲಿಕವಾಗಿ ಸಂಭವಿಸಿದ ಈ ದುರಂತ ಘಟನೆ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ಆಘಾತ ಮತ್ತು ದುಃಖಕ್ಕೆ ಕಾರಣವಾಗಿದೆ.

