ಮುಲ್ಕಿ: ದೈವಸ್ಥಾನ ಕಳವು ಪ್ರಕರಣವೊಂದರಲ್ಲಿ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಮುಲ್ಕಿ ಪೊಲೀಸರು ತಮಿಳುನಾಡಿನ ತಿರುಪ್ಪುರದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 70/2018ರ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂಡಬಿದ್ರಿ ಹಿರಿಯ ಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯದ ಸಿಸಿ ನಂ. 462/2023ರಲ್ಲಿ ಆರೋಪಿಯಾಗಿದ್ದ ತಮಿಳುನಾಡು ಮೂಲದ ನಾಗರಾಜನ್ (38) ಎಂಬಾತನ ವಿರುದ್ಧ ದಸ್ತಗಿರಿ ವಾರಂಟ್ ಹಾಗೂ ಪ್ರೋಕ್ಲಮೇಷನ್ ಜಾರಿಯಾಗಿತ್ತು.
ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ತಮಿಳುನಾಡಿನ ತಿರುಪ್ಪುರದಲ್ಲಿದ್ದ ನಾಗರಾಜನ್ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

