ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿ ನಾಲ್ವರು ಅಂತರಜಿಲ್ಲಾ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಚಿನ್ನ, ಬೆಳ್ಳಿ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳು ಸೇರಿದಂತೆ ಒಟ್ಟು ₹17.20 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸೆಪ್ಟೆಂಬರ್ 1ರ ಮಧ್ಯರಾತ್ರಿ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದ ಗರ್ಭಗುಡಿಯ ಮುಖ್ಯ ದ್ವಾರದ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು, ಗರ್ಭಗುಡಿಯಲ್ಲಿದ್ದ ಬೆಲೆಬಾಳುವ ಕೊರ್ದಬ್ಬು ದೈವದ ಮೂರ್ತಿಗಳು ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಿದ್ದರು. ಈ ಸಂಬಂಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಸೆಪ್ಟೆಂಬರ್ 6ರಂದು ಮುಲ್ಕಿಯ ಕಾರ್ನಾಡು ಪ್ರದೇಶದಲ್ಲಿ ಜಾಹೀದ್ ಸಿನಾನ್ ಹಾಗೂ ಯಾಸೀನ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಳಿಕ ಸೆಪ್ಟೆಂಬರ್ 7ರಂದು ದಾವಣಗೆರೆಯಲ್ಲಿ ಮಹಮದ್ ಅಫ್ರಿದಿ ಮತ್ತು ಎಸ್.ಕೆ. ಅಬ್ದುಲ್ ಜುಮ್ಮಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದು ನಡೆಸಿದ ವಿಚಾರಣೆಯ ವೇಳೆ, ಕಳವು ಮಾಡಲಾಗಿದ್ದ ಸುಮಾರು 4 ಕೆ.ಜಿ. 521 ಗ್ರಾಂ ಬೆಳ್ಳಿ ಹಾಗೂ 34.820 ಗ್ರಾಂ ಚಿನ್ನಾಭರಣ ಸೇರಿದಂತೆ ₹11.20 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಕೃತ್ಯಕ್ಕೆ ಬಳಸಿದ್ದ ಬೈಕ್ ಮತ್ತು ಕಾರು ಸೇರಿದಂತೆ ಸುಮಾರು ₹6 ಲಕ್ಷ ಮೌಲ್ಯದ ವಾಹನಗಳನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳ ಬಂಧನದಿಂದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಶ್ರೀ ಮಹಾಲಕ್ಷ್ಮೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣ ಹಾಗೂ ಉಡುಪಿ ಜಿಲ್ಲೆಯ ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಇನ್ನಾ ಗ್ರಾಮದ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣಗಳಿಗೂ ಸಂಬಂಧ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಮೊದಲ ಆರೋಪಿಯಾಗಿರುವ ಜಾಹೀದ್ ಸಿನಾನ್ ವಿರುದ್ಧ ಈ ಹಿಂದೆ ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ದಾವಣಗೆರೆ ಹಾಗೂ ಮಂಗಳೂರು ನಗರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 18 ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶೀಕಾಂತ್ ಕೆ. ಅವರ ನೇತೃತ್ವದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕ ಪ್ರಮೋದ್ ಕುಮಾರ್, ಮುಲ್ಕಿ ಠಾಣೆಯ ಪಿಎಸ್ಐ ರಾಘವೇಂದ್ರ ನಾಯಕ್ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

