ಮಂಗಳೂರು: ಕರ್ನಾಟಕದ ಪ್ರಮುಖ ಪ್ರಾದೇಶಿಕ ಭಾಷೆಗಳಲ್ಲಿ ಒಂದಾಗಿರುವ ತುಳುವನ್ನು ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಿಸಬೇಕು ಎಂದು ತುಳುನಾಡ ದೈವ ಪರಿಚಾರಕರ ಕ್ಷೇಮಾಭಿವೃದ್ಧಿ ಟ್ರಸ್ಟ್ ಹಾಗೂ ಜೈ ತುಳುನಾಡು ಸಂಘಟನೆ ಆಗ್ರಹಿಸಿದೆ.
ಈ ಕುರಿತು ವಿಧಾನಸಭಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಿರುವ ಟ್ರಸ್ಟ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲದೆ ಕರ್ನಾಟಕದ ವಿವಿಧ ಭಾಗಗಳಲ್ಲಿಯೂ ಲಕ್ಷಾಂತರ ಜನರು ತುಳುವನ್ನು ಆಡುಭಾಷೆಯಾಗಿ ಬಳಸುತ್ತಿದ್ದಾರೆ ಎಂದು ತಿಳಿಸಿದೆ.

ತುಳು ಭಾಷೆಗೆ ಸುದೀರ್ಘ ಇತಿಹಾಸ ಹಾಗೂ ಶ್ರೀಮಂತ ಸಾಂಸ್ಕೃತಿಕ ಪರಂಪರೆಯಿದ್ದು, ಯಕ್ಷಗಾನ, ಭೂತಾರಾಧನೆ, ಜಾನಪದ ಕಲೆಗಳು ಹಾಗೂ ವಿಶಿಷ್ಟ ತುಳು ಲಿಪಿ ಮೂಲಕ ಜಾಗತಿಕ ಮಟ್ಟದಲ್ಲಿಯೂ ತನ್ನದೇ ಆದ ಗುರುತನ್ನು ಹೊಂದಿದೆ. ತುಳು ಕರ್ನಾಟಕದ ಸಾಂಸ್ಕೃತಿಕ ವೈವಿಧ್ಯತೆ ಹಾಗೂ ಹೆಮ್ಮೆಯ ಪ್ರತೀಕವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಕಳೆದ ಹಲವು ದಶಕಗಳಿಂದ ತುಳು ಭಾಷಿಕರು ತಮ್ಮ ಮಾತೃಭಾಷೆಗೆ ಅಧಿಕೃತ ಹಾಗೂ ಆಡಳಿತಾತ್ಮಕ ಸ್ಥಾನಮಾನ ನೀಡಬೇಕೆಂದು ನಿರಂತರವಾಗಿ ಒತ್ತಾಯಿಸುತ್ತಾ ಬಂದಿದ್ದಾರೆ. ತುಳು ಭಾಷೆಯ ಬೆಳವಣಿಗೆ ಕೇವಲ ಸಾಂಸ್ಕೃತಿಕ ಚಟುವಟಿಕೆಗಳಿಗೆ ಸೀಮಿತವಾಗದೆ, ಆಡಳಿತ ವ್ಯವಸ್ಥೆಯಲ್ಲಿಯೂ ಬಳಕೆಗೆ ಅವಕಾಶ ದೊರೆತಾಗ ಮಾತ್ರ ಭಾಷೆಯ ಸಮಗ್ರ ಉಳಿವು, ಅಭಿವೃದ್ಧಿ ಹಾಗೂ ಮುಂದಿನ ಪೀಳಿಗೆಗೆ ಅದರ ವರ್ಗಾವಣೆ ಸಾಧ್ಯವಾಗಲಿದೆ ಎಂದು ಟ್ರಸ್ಟ್ ಅಭಿಪ್ರಾಯಪಟ್ಟಿದೆ.h
ಹೀಗಾಗಿ, ತುಳುನಾಡಿನ ಜನರ ದೀರ್ಘಕಾಲದ ನ್ಯಾಯಯುತ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ತುಳು ಭಾಷೆಯನ್ನು ಕರ್ನಾಟಕದ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಿಸಲು ಅಗತ್ಯವಾದ ಶಾಸನಾತ್ಮಕ ಹಾಗೂ ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಟ್ರಸ್ಟ್ ಮನವಿ ಮಾಡಿದೆ.
ಈ ಸಂದರ್ಭದಲ್ಲಿ ಕ್ಷೇಮಾಭಿವೃದ್ಧಿ ಟ್ರಸ್ಟ್ ಹಾಗೂ ಜೈ ತುಳುನಾಡು ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು
.

