ಕಾರವಾರ, ಸೆ.17: ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಹಾಗೂ ಮದರಸಾ ಕಟ್ಟಡದ ಮೇಲೆ ಕಲ್ಲು ತೂರಾಟ ನಡೆದಿದೆ ಎನ್ನಲಾದ ಘಟನೆ ಭಟ್ಕಳದ ಗುಳ್ಮಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಬುಧವಾರ ರಾತ್ರಿ ನಡೆದಿದೆ.
ತಲಾಂದದಿಂದ ಆರಂಭಗೊಂಡ ಗಣೇಶ ವಿಸರ್ಜನಾ ಮೆರವಣಿಗೆ ಗುಳ್ಮಿ ರೈಲ್ವೆ ಬ್ರಿಡ್ಜ್ ಮೂಲಕ ಸಾಗುತ್ತಿದ್ದ ವೇಳೆ, ರಸ್ತೆಯ ಪಕ್ಕದಲ್ಲಿರುವ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ತಾಜುಸುನ್ನಾ ಅರೇಬಿಕ್ ಮದರಸಾ ಕಟ್ಟಡದತ್ತ ಕಲ್ಲು ತೂರಲಾಗಿದೆ ಎಂದು ದೂರು ನೀಡಲಾಗಿದೆ. ಘಟನೆಯಲ್ಲಿ ಎರಡು ಕಿಟಕಿ ಗಾಜುಗಳು ಹಾನಿಗೊಳಗಾಗಿವೆ ಎಂದು ತಿಳಿದುಬಂದಿದೆ.
ಈ ಕುರಿತು ಅಬ್ದುಲ್ ಅಲಿಂ ಎಂಬವರು ಭಟ್ಕಳ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಸ್ಥಳೀಯರು ಪೊಲೀಸ್ ಠಾಣೆ ಎದುರು ಜಮಾಯಿಸಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಪರಿಶೀಲನೆ ನಡೆಸಿ, ಘಟನೆಗೆ ಕಾರಣರಾದವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇದೇ ವೇಳೆ, ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಅಪರಿಚಿತರು ಗಣೇಶ ಮೂರ್ತಿಯತ್ತಲೂ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿ ತಲಾಂದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜು ಅವರು ಪ್ರತಿ ದೂರು ನೀಡಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದ್ದು, ಸಿಸಿಟಿವಿ ದೃಶ್ಯಗಳು ಸೇರಿದಂತೆ ಲಭ್ಯವಿರುವ ಸಾಕ್ಷ್ಯಗಳನ್ನು ಪರಿಶೀಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ

