ಮಂಗಳೂರು: ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದನ್ನು ಖಂಡಿಸಿ ಹಾಗೂ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ವಿರೋಧಿಸಿ ಸೆ.18ರಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಹ್ಮಾನ್ ಕೊಲೆ ನಡೆದ ಸಂದರ್ಭದಲ್ಲಿ ಜಿಲ್ಲೆಯ ಮುಸ್ಲಿಂ ನಾಯಕರು ತೀವ್ರವಾಗಿ ಧ್ವನಿ ಎತ್ತಿದ್ದರು. ಆದರೆ ಇದೀಗ ಆ ನಾಯಕರನ್ನು ಮೂಲೆಗುಂಪು ಮಾಡಲಾಗಿದೆ ಎಂದು ಆರೋಪಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ನಾಯಕರಿಗೆ ಸಂಘ ಪರಿವಾರದೊಂದಿಗೆ ವ್ಯವಹಾರಿಕ ಸಂಬಂಧಗಳಿವೆ ಎಂದು ಆರೋಪಿಸಿದ ಅವರು, ಜಿಲ್ಲೆಯ ಪ್ರಭಾವಿಗಳ ಅನೈತಿಕ ಸಂಬಂಧಗಳೇ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ದೊರೆಯಲು ಕಾರಣವಾಗಿದೆ ಎಂದು ದೂರಿದರು.

ಅಲ್ಪಸಂಖ್ಯಾತ ನಾಯಕರನ್ನು ತುಳಿಯಲು ಯಾರು ಕಾರಣರಾಗಿದ್ದಾರೆ ಎಂಬುದನ್ನು ಶೀಘ್ರದಲ್ಲೇ ಬಹಿರಂಗಪಡಿಸುತ್ತೇವೆ. ಇಲ್ಲದಿದ್ದರೆ ಸಮಾಜವೇ ಈ ವಿಚಾರವನ್ನು ಹೊರಗೆ ತರುತ್ತದೆ ಎಂದು ಅನ್ವರ್ ಸಾದತ್ ಬಜತ್ತೂರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ಸೆ.18ರಂದು ಸಚಿವ ಸಂಪುಟ ಸಭೆ ನಡೆಯುತ್ತಿದೆ. ಜಿಲ್ಲೆಯಲ್ಲಿ ಕೋಮು ಶಕ್ತಿಗಳನ್ನು ನಿಯಂತ್ರಿಸದಿದ್ದರೆ ಯಾವುದೇ ಅಭಿವೃದ್ಧಿಯಿಂದ ಪ್ರಯೋಜನವಿಲ್ಲ. ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು ಮುಂದಾಗುವ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಅವರ ನೈತಿಕ ಸ್ಥೈರ್ಯ ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದರು. ಜಿಲ್ಲೆಯಲ್ಲಿನ ಅಕ್ರಮ ವ್ಯವಹಾರಗಳ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮಾಹಿತಿ ಇಲ್ಲದಂತಾಗಿದೆ ಎಂದು ಟೀಕಿಸಿದ ಅವರು, ಈ ಎಲ್ಲ ವಿಚಾರಗಳನ್ನು ಮುಂದಿಟ್ಟುಕೊಂಡು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

