ಬೆಂಗಳೂರು/ಮಂಗಳೂರು: ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸುತ್ತಿರುವುದು ಕರಾವಳಿ ಭಾಗದ ಅಭಿವೃದ್ಧಿಗೆ ಹೊಸ ಚೈತನ್ಯ ನೀಡುವ ಮಹತ್ವದ ಹೆಜ್ಜೆಯಾಗಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ಭರವಸೆ ಸಮಿತಿಯ ಮಾಜಿ ಅಧ್ಯಕ್ಷ ಬಿ.ಎಂ. ಫಾರೂಕ್ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ತುರ್ತು ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.
ಕರಾವಳಿ ಪ್ರದೇಶವು ಉದ್ಯಮ, ಪ್ರವಾಸೋದ್ಯಮ, ಶಿಕ್ಷಣ, ಮೀನುಗಾರಿಕೆ ಹಾಗೂ ಸಾರಿಗೆ ಕ್ಷೇತ್ರಗಳಲ್ಲಿ ರಾಜ್ಯದ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿದ್ದು, ಈ ಭಾಗದ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಫಾರೂಕ್ ಹೇಳಿದ್ದಾರೆ.
ಮಂಗಳೂರು–ಉಡುಪಿ–ಕುಂದಾಪುರ–ಭಟ್ಕಳ ನಗರಗಳನ್ನು ಸಂಪರ್ಕಿಸುವ ಮೆಟ್ರೋ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ಅಧ್ಯಯನ ನಡೆಸಿ ಯೋಜನೆಯನ್ನು ಮುಂದುವರಿಸಬೇಕು. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಗರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯನ್ನು ಆರು ಪಥಗಳಾಗಿ ವಿಸ್ತರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಬೆಂಗಳೂರು–ಮಂಗಳೂರು ಸಂಪರ್ಕಕ್ಕೆ ಪ್ರಮುಖವಾಗಿರುವ ಶಿರಾಡಿ ಘಾಟ್ನಲ್ಲಿ ಸುರಂಗ ಮಾರ್ಗ ಹಾಗೂ ಅಗತ್ಯ ಮೇಲ್ಸೇತುವೆಗಳನ್ನು ನಿರ್ಮಿಸುವ ಮೂಲಕ ಮಳೆಗಾಲದ ಸಂಚಾರ ಸಮಸ್ಯೆ ಮತ್ತು ಭೂಕುಸಿತಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಚಾರ್ಮಾಡಿ ಹಾಗೂ ಸಂಪಾಜೆ ಘಾಟ್ ರಸ್ತೆಗಳನ್ನೂ ಆಧುನೀಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಮಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ NEERI ವರದಿಯ ಶಿಫಾರಸುಗಳನ್ನು ಆಧರಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಕೈಗಾರಿಕಾ ತ್ಯಾಜ್ಯ ನೀರು ನದಿ ಹಾಗೂ ಸಮುದ್ರ ಸೇರುವುದನ್ನು ತಡೆಯಲು ಒಳಚರಂಡಿ ವ್ಯವಸ್ಥೆಯನ್ನು ಸಮಗ್ರವಾಗಿ ಸುಧಾರಿಸಬೇಕು ಎಂದು ಅವರು ತಿಳಿಸಿದ್ದಾರೆ.
ಕರಾವಳಿಯಲ್ಲಿ ಭೂಗತ ಕಚ್ಚಾ ತೈಲ ಸಂಗ್ರಹಣಾ ಘಟಕಗಳು ಇರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಅತ್ಯಾಧುನಿಕ ಅಗ್ನಿಶಾಮಕ ಹಾಗೂ ಸುರಕ್ಷತಾ ವ್ಯವಸ್ಥೆಗಳನ್ನು ರೂಪಿಸಬೇಕು ಎಂದು ಫಾರೂಕ್ ಆಗ್ರಹಿಸಿದ್ದಾರೆ.
ಮೀನುಗಾರಿಕಾ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಸಮಗ್ರ ಮೀನುಗಾರಿಕಾ ನೀತಿ ರೂಪಿಸಬೇಕು. ಹಳೆ ಬಂದರು ಪ್ರದೇಶದ ಧಕ್ಕೆ ಹಾಗೂ ಗೂಡ್ಸ್ ಶೆಡ್ಗಳನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಿ ಆಧುನಿಕ ಮೀನು ಮಾರುಕಟ್ಟೆ ನಿರ್ಮಿಸಬೇಕು. ಫಿಶ್ಮೀಲ್ ಘಟಕಗಳಿಂದ ಉಂಟಾಗುವ ದುರ್ನಾತ ಹಾಗೂ ಪರಿಸರ ಮಾಲಿನ್ಯವನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಬೆಂಗರೆ ಕಡಲತೀರವನ್ನು ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವುದು, ರೈಲು ನಿಲ್ದಾಣ–ಪ್ರಜಾಸೌಧ ಪ್ರದೇಶದಲ್ಲಿ ಸುಸಜ್ಜಿತ ಬಸ್ ಟರ್ಮಿನಲ್ ನಿರ್ಮಿಸುವುದು ಹಾಗೂ ನಗರದ ಸಂಚಾರ ದಟ್ಟಣೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ಅಲ್ಲದೆ, ಮಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ‘ಗ್ರೇಟರ್ ಮಂಗಳೂರು ಇನಿಶಿಯೇಟಿವ್’ ಸ್ಥಾಪಿಸುವುದು ಹಾಗೂ ಉದ್ಯಮಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳನ್ನು ಒಳಗೊಂಡ ‘ಮಂಗಳೂರು ಎಜೆಂಡಾ ಟಾಸ್ಕ್ ಫೋರ್ಸ್’ ರಚಿಸುವಂತೆ ಅವರು ಸಲಹೆ ನೀಡಿದ್ದಾರೆ.
ಮಂಗಳೂರಿನಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಈ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದು ಬಿ.ಎಂ. ಫಾರೂಕ್ ತಿಳಿಸಿದ್ದಾರೆ.

