ಕಾಸರಗೋಡು: ಕನ್ನಡ ಭವನದ ಆಶ್ರಯದಲ್ಲಿ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ಅಕ್ಟೋಬರ್ 11ರಿಂದ 20ರವರೆಗೆ ನಡೆಯಲಿರುವ ‘ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ-2026’ರ ಅಂಗವಾಗಿ ಅಕ್ಟೋಬರ್ 18ರಂದು ದಸರಾ ಕವಿ ಸಮ್ಮೇಳನ ನಡೆಯಲಿದೆ.
ಅಂದು ಬೆಳಗ್ಗೆ 11 ಗಂಟೆಗೆ ನಡೆಯುವ ಕವಿ ಸಮ್ಮೇಳನವನ್ನು ಚುಟುಕು ಬ್ರಹ್ಮ ಹಾಗೂ ಚುಟುಕು ಸಾಹಿತ್ಯ ಪರಿಷತ್ ಸಂಸ್ಥಾಪಕ ಡಾ. ಎಂ.ಜಿ.ಆರ್. ಅರಸ್ ಮೈಸೂರು ಉದ್ಘಾಟಿಸಲಿದ್ದಾರೆ. ಸಾಹಿತ್ಯ ಸಂಘಟಕ ಬಿ. ಶ್ರೀನಿವಾಸ್ ಬಹಾದ್ದೂರ್ ಸರ್ವಾಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಖ್ಯಾತ ಕವಿ ಸಾಹಿತ್ಯ ರತ್ನ ಜಯಪ್ಪ ಹೊನ್ನಾಳಿ (ಜಯ ಕವಿ ಮೈಸೂರು) ಅಧ್ಯಕ್ಷತೆ ವಹಿಸಲಿದ್ದಾರೆ.
ದೇಶದ ವಿವಿಧ ಭಾಗಗಳಿಂದ ಸುಮಾರು 75 ಮಂದಿ ಕವಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಇವರಲ್ಲಿ 21 ಮಂದಿ ಕವಿಗಳಿಗೆ ‘ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ-2026’ ನೀಡಿ ಗೌರವಿಸಲಾಗುವುದು. ಇದೇ ವೇಳೆ ಆಯ್ದ ಕವಿಗೆ ‘ಕಾಸರಗೋಡು ದಸರಾ ಕವಿ ಶ್ರೇಷ್ಠ ಪ್ರಶಸ್ತಿ’ ನೀಡಿ ಸನ್ಮಾನಿಸಲಾಗುವುದು ಎಂದು ಕಾಸರಗೋಡು ದಸರಾ ಸಂಚಾಲಕ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಮತ್ತು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದ ಸಾಂಸ್ಕೃತಿಕ ಘಟಕದ ಅಧ್ಯಕ್ಷ ಪಾಂಗೋಡು ಪ್ರವೀಣ್ ನಾಯಕ್ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

