ಮಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಬಂದರಿಗೆ ದಿಢೀರ್ ಭೇಟಿ ನೀಡಿ ಬಂದರಿನ ವಿವಿಧ ಭಾಗಗಳನ್ನು ಪರಿಶೀಲಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರೊಂದಿಗೆ ಬಂದರಿಗೆ ಆಗಮಿಸಿದ ಮುಖ್ಯಮಂತ್ರಿ, ಮೀನುಗಾರಿಕಾ ಧಕ್ಕೆಯಲ್ಲಿನ ಚಟುವಟಿಕೆಗಳು, ಬೋಟ್ಗಳ ಸಂಚಾರ, ಮೀನು ಮಾರಾಟ ಹಾಗೂ ವ್ಯಾಪಾರ ವಹಿವಾಟಿನ ಕುರಿತು ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮೀನುಗಾರರೊಂದಿಗೆ ಮಾತುಕತೆ ನಡೆಸಿದ ಅವರು, ಬಂದರಿನಲ್ಲಿ ಎದುರಾಗುತ್ತಿರುವ ಸಮಸ್ಯೆಗಳು, ಮೂಲಸೌಕರ್ಯ ಹಾಗೂ ಮೀನುಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದ ಬೇಡಿಕೆಗಳನ್ನು ಆಲಿಸಿದರು. ಸ್ಥಳೀಯ ಅಧಿಕಾರಿಗಳಿಂದ ಬಂದರಿನ ಕಾರ್ಯವೈಖರಿ ಮತ್ತು ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡರು.
ಧಕ್ಕೆಯಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಂಡಿರುವುದನ್ನು ಗಮನಿಸಿದ ಸಿಎಂ, ಬಂದ್ಗೆ ಕಾರಣವೇನು ಎಂಬುದರ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿ ವಿವರ ಪಡೆದರು. ಧಕ್ಕೆ ಬಂದ್ಗೆ ಕಾರಣರಾದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು, ಅಮಾನತಿಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಹಾಗೂ ಬಂದರು ಮೂಲಸೌಕರ್ಯ ಸುಧಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.
ಶುಕ್ರವಾರ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮರುದಿನವೇ ಮುಖ್ಯಮಂತ್ರಿಗಳು ಮೀನುಗಾರಿಕಾ ಬಂದರಿಗೆ ಭೇಟಿ ನೀಡಿರುವುದು ಗಮನ ಸೆಳೆದಿದೆ.

