ಚೆನ್ನೈ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ನೀಡಲಾಗುವ ಮಧ್ಯಾಹ್ನದ ಬಿಸಿಯೂಟದ ಮೆನುವಿನಲ್ಲಿ ಚಿಕನ್ ಬಿರಿಯಾನಿ ಸೇರ್ಪಡೆಗೊಳಿಸುವ ಕುರಿತು ತಮಿಳುನಾಡು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಶಾಲಾ ಶಿಕ್ಷಣ ಸಚಿವ ರಾಜ್ ಮೋಹನ್ ತಿಳಿಸಿದ್ದಾರೆ.
ಬೆಳೆಯುವ ಹಂತದಲ್ಲಿರುವ ಮಕ್ಕಳಿಗೆ ಅಗತ್ಯವಾದ ಪೌಷ್ಟಿಕಾಂಶ ಮತ್ತು ಪ್ರೋಟೀನ್ ಒದಗಿಸುವ ಉದ್ದೇಶದಿಂದ ಈ ಪ್ರಸ್ತಾಪವನ್ನು ಪರಿಗಣಿಸಲಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಹಂತ ಹಂತವಾಗಿ ಯೋಜನೆ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಸಚಿವರು ಹೇಳಿದ್ದಾರೆ.

ರಾಜ್ಯಾದ್ಯಂತ ಏಕಕಾಲದಲ್ಲಿ ಯೋಜನೆ ಅನುಷ್ಠಾನಗೊಳಿಸುವ ಬದಲು ಆರಂಭದಲ್ಲಿ ಪ್ರಾಯೋಗಿಕವಾಗಿ ಕೆಲ ಶಾಲೆಗಳಲ್ಲಿ ಜಾರಿಗೊಳಿಸಿ, ಅದರ ಪರಿಣಾಮ ಹಾಗೂ ಆಹಾರ ಸುರಕ್ಷತಾ ವ್ಯವಸ್ಥೆಯನ್ನು ಪರಿಶೀಲಿಸಲಾಗುವುದು. ದೊಡ್ಡ ಪ್ರಮಾಣದಲ್ಲಿ ಆಹಾರ ತಯಾರಿಸುವ ಸಂದರ್ಭದಲ್ಲಿ ಸ್ವಚ್ಛತೆ ಮತ್ತು ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಮಾಂಸಾಹಾರ ಸೇವಿಸದ ವಿದ್ಯಾರ್ಥಿಗಳಿಗೆ ಯಾವುದೇ ಅಸೌಕರ್ಯವಾಗದಂತೆ ಸಸ್ಯಾಹಾರಿ ಊಟದ ಆಯ್ಕೆಯೂ ಮುಂದುವರಿಯಲಿದೆ. ಚಿಕನ್ ಬಿರಿಯಾನಿ ನೀಡುವ ಪ್ರಸ್ತಾಪವನ್ನು ರಾಜಕೀಯ ದೃಷ್ಟಿಯಿಂದ ನೋಡದೆ, ಮಕ್ಕಳ ಪೌಷ್ಟಿಕಾಂಶದ ಅಗತ್ಯದ ಹಿನ್ನೆಲೆಯಲ್ಲಿ ಪರಿಗಣಿಸಬೇಕು ಎಂದು ಸಚಿವರು ಹೇಳಿದ್ದಾರೆ.
ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಿಸುವುದು ಮತ್ತು ಅಪೌಷ್ಟಿಕತೆ ಕಡಿಮೆ ಮಾಡುವ ಉದ್ದೇಶದಿಂದ ತಮಿಳುನಾಡಿನಲ್ಲಿ ಈಗಾಗಲೇ ಬೆಳಗಿನ ಉಪಹಾರ ಯೋಜನೆ ಜಾರಿಯಲ್ಲಿದ್ದು, ಇದೀಗ ಮಧ್ಯಾಹ್ನದ ಬಿಸಿಯೂಟದ ಮೆನುವಿನಲ್ಲಿ ಮತ್ತೊಂದು ಬದಲಾವಣೆಗೆ ಸರ್ಕಾರ ಮುಂದಾಗಿದೆ.

