ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾಕೋಡಿ (ಕುರಿಯಾಲ) ಬಳಿ ನಡೆದ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿರುವುದಾಗಿ ತಿಳಿದುಬಂದಿದೆ.
2025ರ ಮೇ 25ರಂದು ಅಬ್ದುಲ್ ರೆಹಮಾನ್ ಅವರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿತ್ತು. ಪಿಕ್ಅಪ್ ವಾಹನದಿಂದ ಮರಳು ಇಳಿಸುತ್ತಿದ್ದ ವೇಳೆ ದಾಳಿ ನಡೆದಿದ್ದು, ಅವರೊಂದಿಗೆ ಇದ್ದ ಕಲಂದರ್ ಶಫಿ ಮೇಲೂ ಗಂಭೀರ ಹಲ್ಲೆ ನಡೆದಿತ್ತು. ಘಟನೆ ಬಳಿಕ ಪ್ರಕರಣ ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿತ್ತು.
ಸುಹಾಸ್ ಶೆಟ್ಟಿ ಹತ್ಯೆಯಾದ ಕೆಲವೇ ದಿನಗಳಲ್ಲಿ ಅಬ್ದುಲ್ ರೆಹಮಾನ್ ಹತ್ಯೆ ನಡೆದಿದ್ದರಿಂದ, ಎರಡೂ ಘಟನೆಗಳ ನಡುವೆ ಪ್ರತೀಕಾರದ ಸಂಬಂಧವಿದೆಯೇ ಎಂಬ ಶಂಕೆಯೂ ಆ ಸಂದರ್ಭದಲ್ಲಿ ವ್ಯಕ್ತವಾಗಿತ್ತು. ಪ್ರಕರಣದ ತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಇದೀಗ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಈ ಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್, ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೂ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಪೊಲೀಸರು ಹಿಂದೂ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಆರೋಪಿಸಿದ ಅವರು, ಪ್ರಭಾಕರ್ ಭಟ್ ಅವರನ್ನು ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ನಡೆದರೆ ಸಂಘಟನೆಗಳ ವತಿಯಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಪಟ್ಟಿ ಸಲ್ಲಿಕೆಯಾಗಿದ್ದು, ಹಲವು ಕಾರ್ಯಕರ್ತರನ್ನು ವಿಚಾರಣೆ ಮತ್ತು ಬಂಧನಕ್ಕೆ ಒಳಪಡಿಸಿರುವುದನ್ನೂ ಶರಣ್ ಪಂಪ್ವೆಲ್ ಪ್ರಸ್ತಾಪಿಸಿದರು. ಪೊಲೀಸ್ ಇಲಾಖೆಯ ಕ್ರಮದ ಹಿಂದೆ ಯಾರ ಒತ್ತಡವಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದರು.

