ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕವಸ್ತು MDMA ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ನಗರ ಅಪರಾಧ ವಿಭಾಗದ (CCB) ಪೊಲೀಸರು ಮೂವರನ್ನು ಬಂಧಿಸಿ, ಸುಮಾರು 24 ಲಕ್ಷ ರೂ. ಮೌಲ್ಯದ 240 ಗ್ರಾಂ MDMA ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು ನಗರದಿಂದ MDMA ಖರೀದಿಸಿ ಮಂಗಳೂರಿನಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಸೆ.26ರಂದು ಸಂಜೆ ಮುಡಿಪು ಕಾಯರ್ಗೋಳಿ ಕ್ರಾಸ್ ಬಳಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 240 ಗ್ರಾಂ MDMA, ನಾಲ್ಕು ಮೊಬೈಲ್ ಫೋನ್ಗಳು ಹಾಗೂ ಮಾದಕವಸ್ತು ಸಾಗಾಟಕ್ಕೆ ಬಳಸಿದ್ದ ಟೆಂಪೋ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಸುಮಾರು 29.80 ಲಕ್ಷ ರೂ. ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರನ್ನು ಮುಡಿಪು ಗೌಸಿಯಾ ಕಂಪೌಂಡ್ನ ನವಾಜ್ ಅಲಿಯಾಸ್ ನವ್ವಾ ಅಲಿಯಾಸ್ ಮುಡಿಪು ನವಾಜ್, ಕೈರಂಗಳ ಅಂಚೆ ವ್ಯಾಪ್ತಿಯ ನಟ್ಟಿಹಿತ್ತಲು ನಿವಾಸಿ ಮೊಹಮ್ಮದ್ ಆರೀಫ್ ಎನ್. ಹಾಗೂ ಕೈರಂಗಳ ಅಂಚೆ ವ್ಯಾಪ್ತಿಯ ಮತ್ತೆಬಾರೆ ನಿವಾಸಿ ಲಾಯ್ಡ್ ಡಿಸೋಜಾ ಎಂದು ಗುರುತಿಸಲಾಗಿದೆ.
ಬಂಧಿತ ನವಾಜ್ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಬೆದರಿಕೆ, ಕೊಲೆಯತ್ನ, ಅಪಹರಣ, ಅತ್ಯಾಚಾರ, ವಂಚನೆ, ದನಗಳ್ಳತನ ಹಾಗೂ ಮಾದಕವಸ್ತು ಮಾರಾಟ ಸೇರಿದಂತೆ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ಸುಮಾರು 16 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈತನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ 12, ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2, ಮುಲ್ಕಿ ಪೊಲೀಸ್ ಠಾಣೆಯಲ್ಲಿ 1 ಹಾಗೂ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿದೆ. ಅಲ್ಲದೆ, ಮಾದಕವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಉಳ್ಳಾಲ ಹಾಗೂ ಕೊಣಾಜೆ ಪೊಲೀಸ್ ಠಾಣೆಗಳಲ್ಲಿ ತಲಾ ಎರಡು ಪ್ರಕರಣಗಳು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಮಾದಕವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ಹಿನ್ನೆಲೆಯಲ್ಲಿ ಅವರ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ, ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

