ಮಂಗಳೂರು: ಮಂಗಳೂರಿನಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಅಧ್ಯಕ್ಷರಾದ ಶ್ರೀ ವೆಂಕಟೇಶ್ ಪ್ರಸಾದ್ ಹಾಗೂ ಪದಾಧಿಕಾರಿಗಳನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು.
ವೆಂಕಟೇಶ್ ಪ್ರಸಾದ್ ರವರು ಮಂಗಳೂರಿನಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಆಸಕ್ತರಾಗಿದ್ದು ಸೂಕ್ತ ಸ್ಥಳವನ್ನು ನಿಗದಿಪಡಿಸಲು ಅತೀ ಶೀಘ್ರದಲ್ಲಿ ಮಂಗಳೂರಿಗೆ ಭೇಟಿ ನೀಡುವ ಅಭಿಪ್ರಾಯವನ್ನು ವ್ಯಕ್ತಪಡಿಸಿದರು, ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಯು.ಟಿ ಖಾದರ್ ರವರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ಯೋಜನೆ ಬಗ್ಗೆ ಚರ್ಚಿಸುದಾಗಿ ತಿಳಿಸಿದರು.

ಮಂಗಳೂರಿನಲ್ಲಿ ಎಲ್ಲಾ ರೀತಿಯ ಸಂಪರ್ಕ ಜಾಲ ಹೊಂದಿದ್ದು ಅಂತಾರಾಷ್ಟ್ರೀಯ ಮಟ್ಟದ ಸ್ಟೇಡಿಯಂ ಅನ್ನು ನಿರ್ಮಿಸಲು ಮಂಗಳೂರು ಸೂಕ್ತ ಸ್ಥಳವಾಗಿದ್ದು ಇದರ ಪ್ರಯೋಜನವನ್ನು ಪಡೆಯಲು KSCA ಮುಂದಾಗಿದ್ದು ಕೂಡಲೇ ಕಾರ್ಯರೂಪಕ್ಕೆ ತರುವ ಸಕಲ ಪ್ರಯತ್ನವನ್ನು ಮಾಡುವುದಾಗಿ ವೆಂಕಟೇಶ್ ಪ್ರಸಾದ್ ಹೇಳಿದರು.
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಿಸಲು ಅಗತ್ಯವಿರುವ ಎರಡು ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಸ್ಥಳ ಪರಿಶೀಲನೆಗೆ ಆಗಮಿಸುವಂತೆ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರು KSCA ಅಧ್ಯಕ್ಷರನ್ನು ಆಹ್ವಾನಿಸಿದರು.
ಕ್ರೀಡಾಂಗಣ ನಿರ್ಮಾಣವಾದರೆ ಕರಾವಳಿ ಭಾಗದ ಕ್ರಿಕೆಟ್ ಆಟಗಾರರಿಗೆ ಹೆಚ್ಚಿನ ಅವಕಾಶಗಳು ದೊರೆಯುವುದರ ಜತೆಗೆ ನಗರದ ಕ್ರೀಡಾ ಮೂಲಸೌಕರ್ಯ ಮತ್ತು ಪ್ರವಾಸೋದ್ಯಮಕ್ಕೂ ಉತ್ತೇಜನ ದೊರೆಯಲಿದೆ ಎಂದು ತಿಳಿಸಿದರು.
ಚರ್ಚೆಯಲ್ಲಿ KSCA ಖಜಾಂಚಿ ಬಿ.ಎನ್.ಮಧುಕರ್, ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಪರಿಣಿತ ಹಾಗೂ ಸದಸ್ಯ ಅನುಪ್ ಶ್ರೀಧರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

