ಮಂಗಳೂರು: ಸುರತ್ಕಲ್ ಸಮೀಪದ ಎಂಆರ್ಪಿಎಲ್ ಪರಿಸರದಲ್ಲಿ ಸಂಭವಿಸಿದ ಭಾರೀ ಸ್ಫೋಟದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪರಿಸ್ಥಿತಿಯ ಕುರಿತು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ಎಂಆರ್ಪಿಎಲ್ ಅಧಿಕಾರಿಗಳು, ಪೊಲೀಸ್ ಆಯುಕ್ತರು, ಸ್ಥಳೀಯ ಪಟ್ಟಣ ಪಂಚಾಯತ್ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಸ್ಫೋಟದ ಬಳಿಕದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಸಂಸದರು ತಿಳಿಸಿದ್ದಾರೆ.
ಸ್ಥಳದಲ್ಲಿ ಸುರಕ್ಷತಾ ಕಾರ್ಯಾಚರಣೆಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿ ಎದುರಾದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಸ್ಥಳೀಯ ಆಸ್ಪತ್ರೆಗಳಲ್ಲೂ ಮುನ್ನೆಚ್ಚರಿಕಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿಯಲ್ಲಿ ಇಂದು ನಿಗದಿಯಾಗಿದ್ದ ತಮ್ಮ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವುದಾಗಿ ತಿಳಿಸಿದ ಸಂಸದರು, ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಲು ಘಟನಾ ಸ್ಥಳಕ್ಕೆ ತೆರಳುತ್ತಿರುವುದಾಗಿ ತಿಳಿಸಿದ್ದಾರೆ.
ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೆ ಶಾಂತಿ ಕಾಪಾಡಬೇಕು. ಪರಿಶೀಲನೆಯಾಗದ ಮಾಹಿತಿ ಹಾಗೂ ವದಂತಿಗಳನ್ನು ಹರಡದೆ, ಪರಿಸ್ಥಿತಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಹಕರಿಸುವಂತೆ ಕ್ಯಾ. ಬ್ರಿಜೇಶ್ ಚೌಟ ಮನವಿ ಮಾಡಿದ್ದಾರೆ.

