ಮಂಗಳೂರು, ಸೆ.30: ನಗರದ ಹೊರವಲಯದ ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಘಟಕದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟಕ್ಕೆ ಓರ್ವ ಕಾರ್ಮಿಕ ಮೃತಪಟ್ಟಿದ್ದು, 9 ಮಂದಿ ಗಾಯಗೊಂಡಿದ್ದಾರೆ.
ಮಧ್ಯಾಹ್ನ ಸುಮಾರು 12.15ರ ವೇಳೆಗೆ MRPLನ Coker Hydrotreater Unit (CHTU)ನಲ್ಲಿ ಈ ಘಟನೆ ನಡೆದಿದೆ. ಹೆಚ್ಚಿನ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೋಲ್ಡ್ ಸೆಪರೇಟರ್ನಲ್ಲಿ ತಾಂತ್ರಿಕ ದೋಷ ಉಂಟಾಗಿ ಸ್ಫೋಟ ಸಂಭವಿಸಿ ಬಳಿಕ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಸ್ಫೋಟದ ತೀವ್ರತೆಗೆ ಜೋಕಟ್ಟೆ, ಕಾವೂರು, ಸುರತ್ಕಲ್ ಸೇರಿದಂತೆ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಮನೆಗಳು ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೆಲವೆಡೆ ಕಿಟಕಿ ಹಾಗೂ ಬಾಗಿಲುಗಳಿಗೆ ಹಾನಿಯಾಗಿರುವುದಾಗಿ ವರದಿಯಾಗಿದೆ.
ಘಟನೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿದ್ದ 23 ವರ್ಷ ಪ್ರಾಯದ ಮನೀಶ್ ಕರ್ಕಡ ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆ ವೇಳೆ ಅವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಗಾಯಗೊಂಡವರ ಪೈಕಿ ಸುರತ್ಕಲ್ ನಿವಾಸಿ ರಾಜೇಶ್ ಅವರಿಗೆ ಗಂಭೀರ ಸ್ವರೂಪದ ಸುಟ್ಟ ಗಾಯಗಳಾಗಿದ್ದು, ಅವರನ್ನು ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸಾದ್, ಇಂದ್ರಜೀತ್ ಹಾಗೂ ರಾಮನ್ ಅವರನ್ನು ಎಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜೆರೋಮ್, ಜಯರಾಮ್, ಅವಿನಾಶ್ ಮತ್ತು ಅಕ್ಷಯ್ ಅವರಿಗೆ MRPL ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಸ್ಫೋಟದ ಸುದ್ದಿ ತಿಳಿಯುತ್ತಿದ್ದಂತೆ MRPLನ ತುರ್ತು ಪ್ರತಿಕ್ರಿಯಾ ತಂಡ, ಅಗ್ನಿಶಾಮಕ ಸಿಬ್ಬಂದಿ, SDRF, ಆಂಬ್ಯುಲೆನ್ಸ್ಗಳು ಸೇರಿದಂತೆ ವಿವಿಧ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿವೆ. ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.
ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಫೋಟದ ನಿಖರ ಕಾರಣ ತಿಳಿಯಲು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ.

