ಮಂಗಳೂರು: ನಕಲಿ ಪಾಸ್ಪೋರ್ಟ್ ಬಳಸಿ ವಿದೇಶಕ್ಕೆ ತೆರಳಲು ಯತ್ನಿಸಿದ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ಬೇವಿಂಜೆ ಗ್ರಾಮದ ನಿವಾಸಿ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
2010ರ ಜೂನ್ 22ರಂದು ವೇಲಾಯುಧನ್ ನಕಲಿ ಪಾಸ್ಪೋರ್ಟ್ ಬಳಸಿ ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸಿದ್ದ. ಈ ವೇಳೆ ವಿಮಾನ ನಿಲ್ದಾಣದ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.
ಈ ಕುರಿತು ಬಜಪೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 419, 420, 468 ಹಾಗೂ 34 ಮತ್ತು ಪಾಸ್ಪೋರ್ಟ್ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು. ತನಿಖೆ ಪೂರ್ಣಗೊಳಿಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ವೇಲಾಯುಧನ್ಗೆ ಒಂದು ವರ್ಷ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಆರೋಪಿ ಕರ್ನಾಟಕ ಹೈಕೋರ್ಟ್ಗೆ ಕ್ರಿಮಿನಲ್ ರಿವಿಷನ್ ಅರ್ಜಿ ಸಲ್ಲಿಸಿದ್ದ. ಆದರೆ ಹೈಕೋರ್ಟ್ ಕೂಡ ಆತನ ಅರ್ಜಿಯನ್ನು ತಿರಸ್ಕರಿಸಿತ್ತು.
ಇದಾದ ಬಳಿಕ ಶಿಕ್ಷೆ ಅನುಭವಿಸದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ. ಆತನ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡವು ಅ.8ರಂದು ಆರೋಪಿಯನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

