ಮಂಗಳೂರು/ಬೆಳ್ತಂಗಡಿ: ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಗೊಂಡು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಧರ್ಮಸ್ಥಳ ಗ್ರಾಮದಲ್ಲಿ ಗುರುವಾರ ನಡೆದಿದೆ.
ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝೀರ್ (38) ಮೃತರು. ಅಡಿಕೆ ಕೊಯ್ಯಲು ಕೋಲು ಬಳಸುತ್ತಿದ್ದ ವೇಳೆ ಸಮೀಪದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ತಗುಲಿದೆ. ಪರಿಣಾಮ ನಝೀರ್ ಅವರಿಗೆ ತೀವ್ರ ವಿದ್ಯುತ್ ಆಘಾತವಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

