ಮಂಗಳೂರು: ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎಯನ್ನು ಮಂಗಳೂರಿಗೆ ಸಾಗಿಸಿ, ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಸುಮಾರು 1.58 ಕೋಟಿ ರೂ. ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಮಾದಕವಸ್ತು ಸೇರಿದಂತೆ ಒಟ್ಟು 1,63,84,000 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಕ್ಟೋಬರ್ 8ರಂದು ರಾತ್ರಿ 10 ಗಂಟೆಗೆ ಉಳ್ಳಾಲ ತಾಲೂಕಿನ ಕುಂಪಲದ ಡಿಮಾರ್ಟ್ ಬಳಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕೇರಳದ ಕಾಸರಗೋಡು ಜಿಲ್ಲೆಯ ಮಂಗಳ್ಪಾಡಿ ನಿವಾಸಿ ಅಬ್ದುಲ್ ಹಾಪೀಲ್ (25), ಮಂಗಳೂರಿನ ಕೂಳೂರು ಕಸಬಾ ಬೆಂಗ್ರೆ ನಿವಾಸಿ ಜಿಯಾವುಲ್ ಹಕ್ (30) ಹಾಗೂ ಪಾಂಡೇಶ್ವರದ ಆಯಿಷಾ ಅಪಾರ್ಟ್ಮೆಂಟ್ನಲ್ಲಿ ವಾಸವಿರುವ ಅಲ್ತಾಫ್ (28) ಎಂದು ಗುರುತಿಸಲಾಗಿದೆ.
ವಾಟರ್ ಪ್ಯೂರಿಫೈಯರ್ನಲ್ಲಿ ಎಂಡಿಎಂಎ ಅಡಗಿಸಿ ಸಾಗಾಟ
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಪಂಜಾಬ್ನ ಅಮೃತಸರದಿಂದ ಎಂಡಿಎಂಎ ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್ನ ನೀರು ಸಂಗ್ರಹಿಸುವ ಭಾಗದಲ್ಲಿ ಅಡಗಿಸಿ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಲು ಯೋಜಿಸಿದ್ದರು. ಬಳಿಕ ಮಾದಕವಸ್ತುವನ್ನು ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಿಗೆ ಪೂರೈಸಿ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ.
ಆರೋಪಿಗಳ ಯೋಜನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ, ಮಾದಕವಸ್ತು ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರು, ಆಟೋ ರಿಕ್ಷಾ ಸೇರಿದಂತೆ ಸೊತ್ತು ವಶ
ಬಂಧಿತರಿಂದ 1 ಕೆಜಿ 796.96 ಗ್ರಾಂ ಎಂಡಿಎಂಎ, ಮೂರು ಮೊಬೈಲ್ ಫೋನ್ಗಳು, ಸಾಗಾಟಕ್ಕೆ ಬಳಸಿದ್ದ ಮಾರುತಿ ಸುಜುಕಿ ಸ್ವಿಫ್ಟ್ ಕಾರು, ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ 1,63,84,000 ರೂ. ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಹಿಂದಿನ ಪ್ರಕರಣಗಳು
ಆರೋಪಿ ಅಬ್ದುಲ್ ಹಾಪೀಲ್ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು. ಜಿಯಾವುಲ್ ಹಕ್ ದುಬೈನ ರಾಸ್ ಅಲ್ ಖೈಮಾದಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಭಾರತಕ್ಕೆ ಮರಳಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಅಲ್ತಾಫ್ ವಿರುದ್ಧವೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತ ಆರೋಪಿಗಳನ್ನು ವಿಚಾರಣೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಇಲಾಖೆ ತಿಳಿಸಿದೆ.

