ಮಂಗಳೂರು: ದೆಹಲಿಯಲ್ಲಿ ಯುವಜನರ ಬಂಧನ ಹಾಗೂ ಅಘೋಷಿತ ತುರ್ತು ಪರಿಸ್ಥಿತಿಯಂತಹ ಬೆಳವಣಿಗೆಗಳನ್ನು ಖಂಡಿಸಿ ಮಂಗಳೂರಿನಲ್ಲಿ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿರೋಧ ರ್ಯಾಲಿ ಹಾಗೂ ಪ್ರತಿಭಟನೆ ನಡೆಯಿತು.
ಪ್ರಜಾಪ್ರಭುತ್ವ ಉಳಿಸಿ ಆಂದೋಲನದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ದೆಹಲಿಯಲ್ಲಿ ಬಂಧನಕ್ಕೊಳಗಾಗಿರುವ ಜೆನ್ ಝೀ (Gen Z) ಯುವಜನರಿಗೆ ಬೆಂಬಲ ವ್ಯಕ್ತಪಡಿಸಲಾಯಿತು. ಪ್ರಜಾಪ್ರಭುತ್ವದ ಮೌಲ್ಯಗಳು, ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ನಾಗರಿಕರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯ ವೇಳೆ ಸಂಘಪರಿವಾರದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಿನ್ನಾಭಿಪ್ರಾಯಗಳಿಗೆ ಅವಕಾಶ ಕಲ್ಪಿಸಬೇಕು ಹಾಗೂ ಯುವಜನರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯಬಾರದು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಪದ್ಮರಾಜ್ ಪೂಜಾರಿ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಎಸ್ಡಿಪಿಐ ಮುಖಂಡರಾದ ರಿಯಾಝ್ ಮತ್ತು ಅನ್ವರ್ ಸಾದಾತ್ ಬಜತ್ತೂರು ಸೇರಿದಂತೆ ವಿವಿಧ ಪಕ್ಷಗಳು ಹಾಗೂ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದರು.
ದೆಹಲಿಯ ಬೆಳವಣಿಗೆಗಳನ್ನು ಖಂಡಿಸಿ ನಡೆದ ಈ ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಒಗ್ಗೂಡಿ ತಮ್ಮ ಪ್ರತಿರೋಧ ವ್ಯಕ್ತಪಡಿಸಿದರು.

