ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಮುಂದಾದ ನಾಯಕರ ಹಾಗೂ ಪ್ರತಿಭಟನಾಕಾರರ ಬಂಧನವನ್ನು ನಟ ಪ್ರಕಾಶ್ ರಾಜ್ ತೀವ್ರವಾಗಿ ಖಂಡಿಸಿದ್ದಾರೆ. ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕುವ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು, ನಾಗರಿಕರ ಧ್ವನಿಯನ್ನು ಎಷ್ಟು ದಿನ ತಡೆಯಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ವೀಡಿಯೊ ಸಂದೇಶ ಹಂಚಿಕೊಂಡಿರುವ ಪ್ರಕಾಶ್ ರಾಜ್, ಪ್ರತಿಭಟನಾ ಸ್ಥಳಕ್ಕೆ ತೆರಳಲು ಮುಂದಾದ ಯುವಕರನ್ನು ವಿಮಾನ ನಿಲ್ದಾಣಗಳಲ್ಲಿ ಹಾಗೂ ಅವರ ಮನೆಗಳಿಂದಲೇ ಬಂಧಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
“ಇದೇನು ನಡೆಯುತ್ತಿದೆ? ಯುವಕರನ್ನು ವಿಮಾನಗಳಿಂದ ಮತ್ತು ಮನೆಗಳಿಂದ ಬಂಧಿಸುತ್ತಿದ್ದೀರಿ. ಪ್ರತಿಭಟನಾ ಸ್ಥಳಕ್ಕೆ ತಲುಪಲೂ ಅವಕಾಶ ನೀಡುತ್ತಿಲ್ಲವೇ? ನೀವು ನಮ್ಮ ಧ್ವನಿಯನ್ನು ಅಡಗಿಸಿಲ್ಲ; ಬದಲಾಗಿ ನಿಮ್ಮನ್ನೇ ನೀವು ಬಂಧಿಸಿಕೊಂಡಿದ್ದೀರಿ” ಎಂದು ಅವರು ಟೀಕಿಸಿದ್ದಾರೆ.
“ಸರ್ವಾಧಿಕಾರದ ವಿರುದ್ಧದ ಹೋರಾಟವನ್ನು ತಡೆಯಲು ಸಾಧ್ಯವಿಲ್ಲ. ಇದು ದೀರ್ಘ ಹೋರಾಟವಾಗಿದ್ದು, ನಾವು ಪ್ರಶ್ನೆಗಳನ್ನು ಕೇಳುತ್ತಲೇ ಇರುತ್ತೇವೆ. ಆಟ ಈಗಷ್ಟೇ ಆರಂಭವಾಗಿದೆ” ಎಂದು ಅವರು ಎಚ್ಚರಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ನಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ ಹಲವು ನಾಯಕರನ್ನು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಪಿಣರಾಯಿ ವಿಜಯನ್ ಸೇರಿದಂತೆ ಪ್ರಮುಖ ನಾಯಕರು ಹಾಗೂ ಪ್ರತಿಭಟನಾಕಾರರು ಮತ್ತು ಪತ್ರಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಪ್ರತಿಭಟನಾಕಾರರ ಬಂಧನದ ಕ್ರಮದ ವಿರುದ್ಧ ವಿವಿಧ ವಲಯಗಳಿಂದ ಆಕ್ಷೇಪ ವ್ಯಕ್ತವಾಗಿದ್ದು, ಪ್ರತಿಭಟನೆಯ ಹಕ್ಕು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಚರ್ಚೆ ತೀವ್ರಗೊಂಡಿದೆ.

