ಮಂಗಳೂರು: ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ, ಪತಿಯೊಬ್ಬ ತನ್ನ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉರುಂದಾಡಿಗುಡ್ಡೆಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಮೂಲತಃ ವಿಜಯಪುರ ಜಿಲ್ಲೆಯವರಾದ ಸೊನಾಲಿ (30) ಎಂದು ಗುರುತಿಸಲಾಗಿದೆ. ಅವರು ಪತಿ ಶಿವಲಿಂಗಪ್ಪ ಮಾದರ (40) ಹಾಗೂ ಇಬ್ಬರು ಮಕ್ಕಳೊಂದಿಗೆ ಕಾವೂರಿನ ಉರುಂದಾಡಿಗುಡ್ಡೆ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.
ಪತ್ನಿಯ ನಡವಳಿಕೆಯ ಬಗ್ಗೆ ಶಿವಲಿಂಗಪ್ಪನಿಗೆ ಅನುಮಾನವಿದ್ದ ಹಿನ್ನೆಲೆಯಲ್ಲಿ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ತಡರಾತ್ರಿ ಇದೇ ವಿಚಾರವಾಗಿ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಈ ವೇಳೆ ಆಕ್ರೋಶಗೊಂಡ ಪತಿ ಮನೆಯಲ್ಲಿದ್ದ ಚೂರಿಯಿಂದ ಪತ್ನಿಗೆ ಇರಿದಿದ್ದಾನೆ ಎನ್ನಲಾಗಿದೆ.
ಚೂರಿ ಇರಿತದಿಂದ ಸೊನಾಲಿ ಅವರ ಕುತ್ತಿಗೆಗೆ ಗಂಭೀರ ಗಾಯವಾಗಿದ್ದು, ಅವರು ಮೃತಪಟ್ಟಿದ್ದಾರೆ. ಘಟನೆಯ ಕುರಿತು ಮಾಹಿತಿ ತಿಳಿದ ಕಾವೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

