ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆಯಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಾರ್ಕಬನಹಳ್ಳಿ ನಿವಾಸಿ ಶಿವಲಿಂಗಪ್ಪ (40) ಬಂಧಿತ ಆರೋಪಿ. ಈತ ಮಂಗಳೂರಿನ ಉರುಂಡಾಡಿಗುಡ್ಡೆಯಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ಸೋನಾಲಿ ಅವರೊಂದಿಗೆ ವಾಸವಾಗಿದ್ದನು.
ಅನೈತಿಕ ಸಂಬಂಧದ ವಿಚಾರವಾಗಿ ಉಂಟಾದ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಕ್ಟೋಬರ್ 12ರಂದು ಶಿವಲಿಂಗಪ್ಪ ತನ್ನ ಪತ್ನಿ ಸೋನಾಲಿಗೆ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 138/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 103(2) ಮತ್ತು 238ರಂತೆ ಪ್ರಕರಣ ದಾಖಲಿಸಲಾಗಿದೆ.
ಆರೋಪಿಯನ್ನು ಅಕ್ಟೋಬರ್ 12ರಂದು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಪ್ರಕರಣದ ಕುರಿತು ಕಾವೂರು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.


