ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.
2021ರ ಮೇ 8ರಂದು ನಡೆದ ಈ ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಡಬ ತಾಲೂಕಿನ ರಾಮಕುಂಜ ನಿವಾಸಿ ಶೇಖರ್ ಅಲಿಯಾಸ್ ಸೇಸಪ್ಪ (30) ಪ್ರಕರಣದ ಆರೋಪಿಯಾಗಿದ್ದಾನೆ.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಯು. ಅವರು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸುಮಂಗಲಾ ಚಕಲಬ್ಬಿ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದ್ದಾರೆ.
ಪೋಕ್ಸೊ ಕಾಯ್ದೆ 2012ರ ಕಲಂ 5(ಎಲ್) ರೆಡ್ ವಿತ್ 6ರ ಅಡಿಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಒಂದು ವರ್ಷ ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಲಾಗಿದೆ.
ಅದೇ ರೀತಿ, ಭಾರತೀಯ ದಂಡ ಸಂಹಿತೆಯ ಕಲಂ 506ರ ಅಡಿಯಲ್ಲಿ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಮತ್ತೊಂದು ವರ್ಷ ಸಾಧಾರಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಆಡ್ಯಂತಾಯ ಅವರು ಸರ್ಕಾರದ ಪರವಾಗಿ ಸಮರ್ಥ ವಾದ ಮಂಡಿಸಿದ್ದರು.

