ಮಂಗಳೂರು: ಪ್ರಾರ್ಥನೆಗಾಗಿ ಚರ್ಚ್ಗೆ ಬರುತ್ತಿದ್ದ ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ವೆಲೆನ್ಸಿಯಾದ ಸೆಂಟ್ ವಿನ್ಸೆಂಟ್ ಫೆರರ್ ಚರ್ಚ್ನ ಫಾದರ್ ಸಿಪ್ರಿಯನ್ ಪಿಂಟೋ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ಕರಾವಳಿ ಭಾಗದಲ್ಲಿ ಆತಂಕ ಮೂಡಿಸಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ದೂರಿನಲ್ಲಿ ಉಲ್ಲೇಖಿಸಿರುವ ಪ್ರಕಾರ, ಚರ್ಚ್ಗೆ ಪ್ರಾರ್ಥನೆಗಾಗಿ ಬರುತ್ತಿದ್ದ ಅಪ್ರಾಪ್ತ ಬಾಲಕನಿಗೆ ಚಾಕೊಲೇಟ್ ನೀಡಿ ಆಮಿಷವೊಡ್ಡಿ, ಬಳಿಕ ಸಾಕ್ರಸ್ಟಿ ಸಮೀಪದ ಕೊಠಡಿಗೆ ಕರೆಸಿಕೊಂಡು ಲೈಂಗಿಕ ದುರುದ್ದೇಶದಿಂದ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಆಗಸ್ಟ್ 14ರಂದು ಸಂಜೆ ಸುಮಾರು 6.30ರ ವೇಳೆಗೆ ಬಾಲಕನನ್ನು ರಿಸೆಪ್ಷನಿಸ್ಟ್ ಕೊಠಡಿಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಘಟನೆಯ ಬಗ್ಗೆ ಬಾಲಕ ತನ್ನ ಸ್ನೇಹಿತರೊಂದಿಗೆ ಮಾತನಾಡಿದಾಗ, ಚರ್ಚ್ಗೆ ಬರುತ್ತಿದ್ದ ಇತರ ಅಪ್ರಾಪ್ತ ಬಾಲಕರೂ ಇದೇ ರೀತಿಯ ಕಿರುಕುಳಕ್ಕೆ ಒಳಗಾಗಿರುವುದಾಗಿ ತಿಳಿದುಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದರಿಂದಾಗಿ, ಇತರ ಬಾಲಕರಿಗೂ ದೌರ್ಜನ್ಯ ನಡೆದಿದೆಯೇ ಎಂಬ ಪ್ರಶ್ನೆ ಉದ್ಭವಿಸಿದ್ದು, ಪ್ರಕರಣದ ಎಲ್ಲ ಆಯಾಮಗಳ ಕುರಿತು ತನಿಖೆ ನಡೆಸಬೇಕೆಂಬ ಒತ್ತಾಯ ವ್ಯಕ್ತವಾಗಿದೆ.
ಘಟನೆಯಿಂದ ಆತಂಕಗೊಂಡ ಬಾಲಕ ಮನೆಯವರಿಗೆ ವಿಷಯ ತಿಳಿಸಿದ ಬಳಿಕ, ಪೋಷಕರು ಧರ್ಮಪ್ರಾಂತ್ಯದ ಬಿಷಪ್ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ ಎನ್ನಲಾಗಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಬಿಷಪ್, ಪೊಲೀಸರಿಗೆ ದೂರು ನೀಡುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಬಾಲಕ ಮತ್ತು ಆತನ ಪೋಷಕರು ಅಕ್ಟೋಬರ್ 16 ರಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಭೇಟಿ ಮಾಡಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಪ್ರಾಪ್ತ ಬಾಲಕರ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೊ (POCSO) ಕಾಯ್ದೆಯಡಿ ಸಂತ್ರಸ್ತರ ಗುರುತು ಮತ್ತು ವಿಳಾಸವನ್ನು ಗೌಪ್ಯವಾಗಿಡಲಾಗಿದೆ. ಸಂತ್ರಸ್ತರ ವಿವರಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ಸೆಕ್ಷನ್ 8 (ಲೈಂಗಿಕ ದೌರ್ಜನ್ಯ) ಮತ್ತು 9 (ತೀವ್ರ ಲೈಂಗಿಕ ದೌರ್ಜನ್ಯ) ಮತ್ತು ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 75(2) (ಲೈಂಗಿಕ ಕಿರುಕುಳ) ಅಡಿಯಲ್ಲಿ ದೂರು ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.ಆರೋಪಗಳ ಸತ್ಯಾಸತ್ಯತೆ ತನಿಖೆಯಿಂದ ತಿಳಿದುಬರಬೇಕಿದೆ.

